ಕಲಬುರಗಿ: ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಮೂಲಕ ರಾಜ್ಯದ ಜೊತೆಗೆ ಕಲ್ಯಾಣ ಕರ್ನಾಟಕ ಭಾಗದ ಸವಾರ್ಂಗೀಣ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಲಾಗುವುದು ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.
ಕೈಗಾರಿಕೆ ಸ್ಥಾಪನೆಗೆ ಸಂಬಂಧಿಸಿದಂತೆ ಜಮೀನು ಗುರುತಿಸಿ ಲಭ್ಯತೆ, ಅವಶ್ಯಕತೆ ಅನುಸಾರವಾಗಿ ಸರಳೀಕರಣಗೊಳಿಸಿ ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗಕ್ಕೆ ಆದ್ಯತೆ ನೀಡಲಾಗುವುದು ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಲಬುರಗಿಯಲ್ಲಿ ನೀರು ಹಾಗೂ ವಿಮಾನದ ಸೌಲಭ್ಯವರಿವುದುರಿಂದ ಇಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಒತ್ತು ಕೊಡಲಾಗುವುದು. ಅದರಂತೆ ಯಾದಗಿರಿ ಜಿಲ್ಲೆಯಲ್ಲಿ ಗುಳೆ ಹೋಗುವ ಪದ್ಧತಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ವಿಶೇಷ ಯೋಜನೆ ರೂಪಿಸುವ ಮೂಲಕ ದುಡಿವ ಕೈಗಳಿಗೆ ಉದ್ಯೋಗ ದೊರಕಿಸಿಕೊಡಲಾಗುವುದು ಎಂದು ಅವರು ಹೇಳಿದರು.
ಚುನಾವಣೆ ವೇಳೆಯಲ್ಲಿ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ಕೈಗಾರಿಕಾ ನೀತಿ ಸೇರಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನೀಡಿದ ಹತ್ತು ಗ್ಯಾರಂಟಿಗಳನ್ನು ಸಹ ಈಡೇರಿಸಲಾಗುವುದು ಎಂದರು.
ಬೆಂಗಳೂರು, ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ರಾಜ್ಯದ ಕೈಗಾರಿಕಾ ಪ್ರದೇಶಗಳ ಸರ್ವೇ ಕಾರ್ಯಕ್ಕೆ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವ ಮೂಲಕ ಈ ಭಾಗದ ಏಳಿಗೆಗೆ ಶ್ರಮಿಸಲಾಗುವುದು ಎಂದು ತಿಳಿಸಿದರು.
ಈಗಾಗಲೇ ಒಂದು ಬಾರಿ ಇಲಾಖೆಯ ಅಧಿಕಾರಿಗಳ ಸಭೆ ನಡೆಸಲಾಗಿದ್ದು, ಇನ್ನು ಹದಿನೈದು ದಿನಗಳಲ್ಲಿ ಇಲಾಖೆಯ ಸಂಪೂರ್ಣ ಮಾಹಿತಿ ಸಿಗಲಿದೆ. ನಂತರದ ದಿನಗಳಲ್ಲಿ ಟೈಂ ಬಾಂಡ್ ಹಾಕಿಕೊಂಡು ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುವುದು ಎಂದು ಅವರು ವಿವರಿಸಿದರು.
ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಶಾಸಕ ಅಲ್ಲಮಪ್ರಭು ಪಾಟೀಲ, ಮಾಜಿ ಶಾಸಕ ತಿಪ್ಪಣ್ಣಪ್ಪ ಕಮಕನೂರ, ಮುಖಂಡರಾದ ಸುಭಾಷ ರಾಠೋಡ್, ಡಾ.ಕಿರಣ ದೇಶಮುಖ, ಚಂದ್ರಿಕಾ ಪರಮೇಶ್ವರ, ಲತಾ ರವಿ ರಾಠೋಡ್, ಲಾಲ್ ಅಹ್ಮದ್ ಸೇಠ್, ಸೋಮಶೇಖರ ಗೋನಾಯಕ, ಮಜರ್ ಹುಸೇನ್ ಇತರರಿದ್ದರು.