ಕಲಬುರಗಿ: ರಾಜ್ಯದ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ಸೆಪ್ಟೆಂಬರ್ ೧೭ರಂದು ಕಲ್ಯಾಣ ಕರ್ನಾಟಕ ಪ್ರದೇಶದ ಉದ್ಘೋಷಣೆ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಸರ್ಕಾರಿ ಸೌಲಭ್ಯಗಳ ವಿತರಣೆ ಕಾರ್ಯಕ್ರಮಕ್ಕಾಗಿ ನೂತನ ವಿದ್ಯಾಲಯ ಮೈದಾನದಲ್ಲಿ ಬೃಹತ್ ವೇದಿಕೆಯನ್ನು ಸಿದ್ಧಪಡಿಸಲಾಗುತ್ತಿದ್ದು, ರವಿವಾರ ಜಿಲ್ಲಾಧಿಕಾರಿ ಬಿ. ಶರತ್ ಅವರು ಭೇಟಿ ನೀಡಿ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು.
ಪ್ರಮುಖ ವೇದಿಕೆ ಸಿದ್ಧತೆ, ಗಣ್ಯರು, ಸಾರ್ವಜನಿಕರು, ಪತ್ರಕರ್ತರು, ಫಲಾನುಭವಿಗಳು ಮುಂತಾದವರ ಆಸನ ವ್ಯವಸ್ಥೆ ಕುರಿತು ವೀಕ್ಷಿಸಿದರು. ಮಳೆ ಬಂದರೂ ಕಾರ್ಯಕ್ರಮಕ್ಕೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ವೇದಿಕೆಯನ್ನು ನಿರ್ಮಿಸುವಂತೆ ಸೂಚಿಸಿದರು. ಸಾರ್ವಜನಿಕರಿಗೆ ಊಟ ಹಾಗೂ ನೀರಿನ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಡಿಸಿಪಿ ಬಿ. ಕಿಶೋರಬಾಬು, ಹೆಚ್ಚುವರಿ ಜಿಲ್ಲಾಧಿಕಾರಿ ಬಿ. ಶರಣಪ್ಪ ಸತ್ಯಂಪೇಟ್, ಕಲಬುರಗಿ ಸಹಾಯಕ ಆಯುಕ್ತ ರಾಹುಲ ಪಾಂಡ್ವೆ, ಕಲಬುರಗಿ ಎ-ಉಪವಿಭಾಗದ ಎಸಿಪಿ ವಿಜಯಕುಮಾರ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಅಮೀನ್ ಮುಖ್ತಾರ, ಬ್ರಹ್ಮಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀಮಂತ ಇಲ್ಲಾಳ, ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ ಸೇರಿದಂತೆ ಮತ್ತಿತರರು ಹಾಜರಿದ್ದರು.