ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ಸೆಪ್ಟೆಂಬರ್ 17 ರಂದು ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದು, ಇದರ ಹಿನ್ನೆಲೆಯಲ್ಲಿ ಕಲಬುರಗಿ ಪೊಲೀಸ್ ಆಯುಕ್ತ ಡಾ. ಎಂ.ಎನ್. ನಾಗರಾಜ್. ಜಿಲ್ಲಾಧಿಕಾರಿ ಬಿ. ಶರತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ ಹಾಗೂ ಡಿಸಿಪಿ ಬಿ. ಕಿಶೋರಬಾಬು ಅವರು ಅವರು ವಿಮಾನ ನಿಲ್ದಾಣಕ್ಕೆ ತೆರಳಿ ಭದ್ರತೆ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿದರು.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿಗಳನ್ನು ಬರಮಾಡಿಕೊಳ್ಳುವುದು, ಪೊಲೀಸ್ರಿಂದ ಗೌರವ ವಂದನೆ ಸ್ವೀಕರಿಸುವ ಬಗ್ಗೆ ಸ್ಥಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಅಮೀನ್ ಮುಖ್ತಾರ ಅವರು ಮುಖ್ಯಮಂತ್ರಿಗಳನ್ನು ಬರಮಾಡಿಕೊಳ್ಳಲು ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಐಎಎಸ್ ಪ್ರೊಬೇಷನರಿ ಅಧಿಕಾರಿ ಡಾ. ಬಿ. ಗೋಪಾಲಕೃಷ್ಣ ರಾಘವೇಂದ್ರ, ವಿಮಾನ ನಿಲ್ದಾಣದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.