ಕಲಬುರಗಿ: ಇದೇ ಮೊದಲ ಬಾರಿಗೆ ಕಲಬುರಗಿ ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಸಂಘದ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಅವರ 133ನೇ ಜಯಂತ್ಯುತ್ಸವ ಆಚರಿಸಲಾಗುತ್ತಿದ್ದು, ಏ.10ರಿಂದ 14ರವರೆಗೆ ಸಾರ್ವಜನಿಕ ಉದ್ಯಾನದ ಬಳಿ ಇರುವ ಟೌನ್ ಹಾಲ್ ನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ಅನಿಲಕುಮಾರ ನರೋಣ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ಶರಣು ಅತನೂರ ತಿಳಿಸಿದರು.
ಕಾರ್ಮಿಕರು ಹಾಗೂ ಅವರ ಮಕ್ಕಳು ಮತ್ತು ಕುಟುಂಬದವರಿಗಾಗಿಯೇ ಉಚಿತ ಆರೋಗ್ಯ ತಪಾಸಣಾ ಶಿಬಿರ, ರಂಗೋಲಿ ಸ್ಪರ್ಧೆ, ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ. 14ರಂದು ಬೆಳಗ್ಗೆ 8 ಗಂಟೆಗೆ 133 ಪೌರ ಕಾರ್ಮಿಕರು ರಕ್ತದಾನ ಮಾಡಲಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
14ರಂದು ಬೆಳಗ್ಗೆ 11 ಗಂಟೆಗೆ ಬಹಿರಂಗ ಸಭೆ ನಡೆಯಲಿದ್ದು, ಬಿಕ್ಕುಣಿ ಸುಮನ್ ಅವರು ಸಾನ್ನಿಧ್ಯ ವಹಿಸಲಿದ್ದಾರೆ. ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಉದ್ಘಾಟಿಸಲಿದ್ದಾರೆ. ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ಸಲಹಾ ಸಮಿತಿ ಸದಸ್ಯೆ ಡಾ. ಜಯದೇವಿ ಗಾಯಕವಾಡ ವಿಶೇಷ ಭಾಷಣ ಮಾಡಲಿದ್ದಾರೆ. ಪಾಲಿಕೆ ಉಪ ಆಯುಕ್ತ ಆರ್.ಪಿ. ಜಾಧವ, ಕಾರ್ಯಪಾಲಕ ಅಭಿಯಂತರ ಶಿವನಗೌಡ ಪಾಟೀಲ, ಕೆ.ಎಸ್. ಪಾಟೀಲ ಗೌರವ ಉಪಸ್ಥಿತಿ ಇರಲಿದ್ದಾರೆ. ವಲಯ ಆಯುಕ್ತ ರಮೇಶ ಪಟ್ಟೇದಾರ ಅತಿಥಿಯಾಗಿ ಆಗಮಿಸಲಿದ್ದಾರೆ ಎಂದು ಹೇಳಿದರು.