ಕಲಬುರಗಿ: ಅಂಬೇಡ್ಕರ್ ಪ್ರತಿಮೆಗೆ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಸಂಜೆ ಜೈಲಿನಿಂದ ಬಿಡುಗಡೆಯಾಗಿದ್ದ ಆರೋಪಿಗಳ ಮನೆಗೆ ನುಗ್ಗಿ ದಾಂಧಲೆ ಮಾಡಿದ್ದನ್ನು ವಿರೋಧಿಸಿ ಬುಧವಾರ ಬೆಳಗ್ಗೆ ಇಲ್ಲಿನ ಕೋಟನೂರ ಬಳಿ ಪ್ರತಿಭಟನೆ ನಡೆಸಲಾಯಿತು.
ರಸ್ತೆ ಸಂಚಾರ ಬಂದ್ ಮಾಡಿ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಸಂಸದ ಡಾ. ಉಮೇಶ ಜಾಧವ, ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಅರುಣಕುಮಾರ ಪಾಟೀಲ, ಚಂದು ಪಾಟೀಲ ಇತರರು ಆಗಮಿಸಿ ರಸ್ತೆಯಲ್ಲೇ ಕುಳಿತು ಪ್ರತಿಭಟನೆ ಆರಂಭಿಸಿದರು.
ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ ಕಮಿಷನರ್ ಚೇತನ್ ಆರ್. ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದರು. ಶಾಸಕ ಅಲ್ಲಮಪ್ರಭು ಪಾಟೀಲ ಸ್ಥಳಕ್ಕೆ ಆಗಮಿಸಿದಾಗ ಗೋ ಬ್ಯಾಕ್ ಘೋಷಣೆ ಕೂಗಿದರು.
ಈ ವೇಳೆ ಉಂಟಾದ ನೂಕಾಟದಲ್ಲಿ ಆಯ ತಪ್ಪಿ ಬಿದ್ದ ಸಂಸದ ಡಾ. ಉಮೇಶ ಜಾದವ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಪ್ರತಿಭನೆಯಿಂದಾಗಿ ಸುಮಾರು ಮೂರ್ನಾಲ್ಕು ಗಂಟೆಗಳ ಕಾಲ ರಸ್ತೆ ಸಂಚಾರ ಬಂದ್ ಆಗಿತ್ತು. ಹೀಗಾಗಿ ಪ್ರಯಾಣಿಕರು ಸಾಕಷ್ಟು ಪರದಾಡಬೇಕಾಯಿತು.