ಕಲಬುರಗಿ: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಹಾಗೂ ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಜು. 13ರಂದು ಬೀದರ್ ನ ಪೂಜ್ಯ ಡಾ. ಚನ್ನಬಸವ ಪಟ್ಟದ್ದೇವರ ರಂಗ ಮಂದಿರಲ್ಲಿ ಶಿಕ್ಷಣ ನಮ್ಮ ಹಕ್ಕು ವಿಚಾರ ಸಂಕಿರಣ ಹಾಗೂ ರಾಜ್ಯ ಮಟ್ಟದ ಕಾಯಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾ ಘಟಕದ ಅದ್ಯಕ್ಷ ರವೀಂದ್ರ ಶಾಬಾದಿ ಹಾಗೂ ಪ್ರಧಾನ ಕಾರ್ಯದರ್ಶಿ ಡಾ. ಶಿವರಂಜನ ಸತ್ಯಂಪೇಟೆ ತಿಳಿಸಿದ್ದಾರೆ.
ಪರಿಷತ್ ಸಂಸ್ಥಾಪಕ ಅದ್ಯಕ್ಷ ಡಾ. ಹುಲಿಕಲ್ ನಟರಾಜ ನೇತೃತ್ವದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು, ಬೆಲ್ದಾಳ ಸಿದ್ರಾಮ ಶರಣರು, ಸಚಿವರಾದ ಈಶ್ವರ ಖಂಡ್ರೆ, ರಹೀಂಖಾನ್, ಇಸ್ರೋ ವಿಜ್ಞಾನಿ ಡಾ. ಎ.ಎಸ್. ಕಿರಣಕುಮಾರ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಅಂತರರಾಷ್ಟ್ರೀಯ ಖ್ಯಾತಿಯ ಕೌಶಲ ತರಬೇತುದಾರ ಚೇತನರಾಮ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಇದೇವೇಳೆಯಲ್ಲಿ ರಾಜ್ಯಮಟ್ಟದ ಕಾಯಕರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದ್ದು, ಕಲಬುರಗಿ, ಬೆಳಗಾವಿ ಹಾಗೂ ಮೈಸೂರು ವಿಭಾಗದ ಒಟ್ಟು 26 ಸಾಧಕರಿಗೆ ರಾಜ್ಯಮಟ್ಟದ ಕಾಯಕರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಶಿವಣ್ಣಗೌಡಗೆ ಕಾಯಕರತ್ನ ಪ್ರಶಸ್ತಿ: ಕಲಬುರಗಿ ಜಿಲ್ಲೆಯಿಂದ ಈ ಬಾರಿ ಜೇವರ್ಗಿ ತಾಲ್ಲೂಕಿನ ಶಿವಣ್ಣಗೌಡ ಕಲ್ಲಹಂಗರಗಿ ಅವರನ್ನು ಕಾಯಕರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದ್ದಾರೆ.ವ್ಯವಸಾಯದ ಜೊತೆಗೆ ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಹಿತ್ಯಕ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ಶಿವಣ್ಣಗೌಡ ಅವರು ಜೇವರ್ಗಿ ತಾಲ್ಲೂಕು ಕಸಾಪದ ನಿಕಟಪೂರ್ವ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.ಜೇವರ್ಗಿಯಲ್ಲಿರುವ ಗದುಗಿನ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದು, ಜೇವರ್ಗಿ ತಾಲ್ಲೂಕು ಬಸವ ಕೇಂದ್ರದ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಈ ಸೇವೆಯನ್ನು ಪರಿಗಣಿಸಿ ಈ ಬಾರಿಯ ರಾಜ್ಯಮಟ್ಟದ ಕಾಯಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.