ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಜುಲೈ 13 ಮತ್ತು 14 ರಂದು ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಸಿದ್ದು, ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡದೆ ಸದರಿ ಪರೀಕ್ಷೆಗಳು ಸುಸೂತ್ರವಾಗಿ ನಡೆದಿವೆ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.
ಜುಲೈ 13 ರಂದು 4 ಮತ್ತು ಜುಲೈ 14 ರಂದು 14 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಪ್ರತಿ ಪರೀಕ್ಷಾ ಕೇಂದ್ರಕ್ಕೆ ಬೇರೆ ಜಿಲ್ಲೆಗಳ ಪದವಿ ಕಾಲೇಜಿನ ಪ್ರಾಧ್ಯಾಪಕರನ್ನು ವೀಕ್ಷಕರನ್ನಾಗಿ ನೇಮಿಸಲಾಗಿತ್ತು. ಇದಲ್ಲದೆ ಜಿಲ್ಲೆಯಲ್ಲಿ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಮೇಲುಸ್ತುವಾರಿ ನೋಡಿಕೊಳ್ಳಲು ವೀಕ್ಷಕರಾಗಿ ನೇಮಿಸಲಾಗಿತ್ತು ಎಂದಿದ್ದಾರೆ.
ಜಿಲ್ಲೆಯ 14 ಪರೀಕ್ಷಾ ಕೇಂದ್ರಗಳು ವೆಬ್ ಕಾಸ್ಟಿಂಗ್‌ಗೆ ಒಳಪಟ್ಟಿದ್ದು, ಬೆಂಗಳೂರು ಕೇಂದ್ರ ಕಛೇರಿ ಮತ್ತು ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿಯಿಂದಲೆ ಪರೀಕ್ಷಾ ಪ್ರಕ್ರಿಯೆ ವೀಕ್ಷಿಣೆಗೆ ವ್ಯವಸ್ಥೆ ಮಾಡಲಾಗಿತ್ತು ಎಂದು ಡಿ.ಸಿ. ತಿಳಿಸಿದ್ದಾರೆ.