ಕಲಬುರಗಿ: ಜೇವರ್ಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಕ ಓರ್ವರನ್ನು ವಿಚಾರಣೆ ಕಾಯ್ದಿರಿಸಿ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಅದೇಶ ಹೊರಡಿಸಿದ್ದಾರೆ.
ಜೇವರ್ಗಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಕರಾದ ಪ್ರಭುಗೌಡ ಮಾಡಗಿ ಅಮಾನತುಗೊಂಡಿರುವ ಶಿಕ್ಷಕ. ಸದರಿ ಶಿಕ್ಷಕನ ಮೇಲೆ ವಿದ್ಯಾರ್ಥಿಗಳು ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯದ ಕುರಿತು ಪ್ರಾಂಶುಪಾಲರಿಗೆ ಲಿಖಿತವಾಗಿ ದೂರು ನೀಡಿದ್ದರು,
ಈ ಆರೋಪದ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಭು ದೊರೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಾವಿದ್ ಎಸ್ ಕರಂಗಿ ಹಾಗೂ ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಡಾ.ಕರಬಸಮ್ಮ ಅವರು ಬುಧವಾರ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿ ಜಂಟಿಯಾಗಿ ಸಲ್ಲಿಸಿರುವ ವರದಿಯನ್ನು ಆಧರಿಸಿ ಜಿಲ್ಲಾಧಿಕಾರಿಗಳು ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ, ಸೇವೆಯಿಂದ ಅಮಾನತು ಮಾಡಿ ಆದೇಶಿಸಿರುತ್ತಾರೆ.
ಇವರು ಕರ್ನಾಟಕ ನಾಗರೀಕ ಸೇವಾ ನಿಯಮಾವಳಿ ನಿಯಮ 98(ಎ) (ಡಿ)ರ ಪ್ರಕಾರ ಜೀವನಾಂಶ ಭತ್ಯೆ ಪಡೆಯಲು ಅರ್ಹರಿರುತ್ತಾರೆ ಹಾಗೂ ಅಮಾನತ್ತಿನ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೇ ಕೇಂದ್ರಸ್ಥಾನ ಬಿಡತಕ್ಕದ್ದಲ್ಲ ಎಂದು ಆದೇಶದಲ್ಲಿ ತಿಳಿಸಿರುತ್ತಾರೆ.