ಬೆಂಗಳೂರು; ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಅಲ್ಪಸಂಖ್ಯಾತರ ಸಮುದಾಯದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.
ಇಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಹಜ್ ಭವನದಲ್ಲಿ ಆಯೋಜಿಸಲಾಗಿದ್ದ ಅಲ್ಪಸಂಖ್ಯಾತರಿಗೆ ವಾಹನ, ಸಾಲ ಮತ್ತು ಸಬ್ಸಿಡಿ ವಿತರಣೆ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಸರ್ಕಾರ ಅಲ್ಪಸಂಖ್ಯಾತರ ಕಲ್ಯಾಣಕ್ಕೆ 3200 ಕೋಟಿ ರೂ. ಒದಗಿಸಿದೆ. ಈ ಪೈಕಿ 1480 ಕೋಟಿ ರೂ. ಶಿಕ್ಷಣಕ್ಕೆ ವೆಚ್ಚ ಮಾಡಲಾಗುತ್ತಿದೆ. ಇದರಿಂದ ಸಮುದಾಯದ ಲಕ್ಷಾಂತರ ಮಕ್ಕಳು ವೈದ್ಯಕೀಯ, ಇಂಜಿನಿಯರರಿಂಗ್ ಸೇರಿದಂತೆ ಉನ್ನತ ಶಿಕ್ಷಣ ಪಡೆಯಲು ಸಹಕಾರಿ ಆಗಿದೆ. ಅಲ್ಲದೆ ಅವರು ವಿದೇಶದಲ್ಲಿ ವ್ಯಾಸಂಗಕ್ಕೆ ಹೋಗುವಂತಾಗಿದೆ. ಹಲವರು ಐಎಎಸ್ -ಐಪಿಎಸ್ ತರಬೇತಿ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.
ರಾಜ್ಯದಲ್ಲಿ ವಸತಿ ಹಾಗೂ ನಿವೇಶನ ರಹಿತರ ಸಮೀಕ್ಷೆ ನಡೆಸಲು ತೀರ್ಮಾನ ಮಾಡಲಾಗಿದೆ. ರಾಜ್ಯದ ಪ್ರತಿ ಕುಟುಂಬಕ್ಕೂ ಸೂರು ಕಲ್ಪಿಸುವುದು ನಮ್ಮ ಸರ್ಕಾರದ ಸಂಕಲ್ಪ. ಈಗಾಗಲೇ 2.32 ಲಕ್ಷ ಬಡವರಿಗೆ ಮನೆ ಕಟ್ಟಿಕೊಡುವ ಕ್ರಾಂತಿಕಾರಕ ನಿರ್ಧಾರ ಮಾಡಲಾಗಿದೆ ಎಂದು ಹೇಳಿದರು.
ಕೆಎಂಡಿಸಿಯಿಂದ ಶಿಕ್ಷಣ ಹಾಗೂ ಸ್ವಾವಲಂಬಿ ಜೀವನ ನಡೆಸಲು ಸಾಕಷ್ಟು ಯೋಜನೆ ರೂಪಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರಾದ ಬಿ.ಕೆ ಅಲ್ತಾಫ್ ಖಾನ್ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ.
ಹಜ್ ಯಾತ್ರಿಗಳ ಸೇವೆ ಸಲ್ಲಿಸಿದ ಸ್ವಯಂ ಸೇವಕರನ್ನು ವೈಯಕ್ತಿಕವಾಗಿ ಉಮ್ರಾ ಯಾತ್ರೆಗೆ ಕಳುಹಿಸಲಾಗುತ್ತಿದ್ದು, ಈ ಬಾರಿಯೂ 220 ಮಂದಿಗೆ ವ್ಯವಸ್ಥೆ ಮಾಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ 177 ಆಟೋ ರಿಕ್ಷಾ 68 ಟ್ಯಾಕ್ಸಿ, 30 ಗೂಡ್ಸ್ ವಾಹನ ಸೇರಿ 579 ಮಂದಿಗೆ ಸುಮಾರು 7.86 ಕೋಟಿ ರೂ. ಮೊತ್ತದ ಸವಲತ್ತು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಪೌರಾಡಳಿತ ಮತ್ತು ಹಜ್ ಸಚಿವ ರಹೀಮ್ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ನಸೀರ್ ಅಹಮದ್ ಮಾಜಿ ಸಚಿವ ಹಿಂಡಸಗೇರಿ ಶಾಸಕ ರಾದ ಇಕ್ಬಾಲ್ ಹುಸೇನ್, ಅಬ್ದುಲ್ ಜಬ್ಬಾರ್, ಐವಾನ್ ಡಿಸೋಜ, ಬಿಲ್ಕಿಸ್ ಬಾನು, ವಖ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾμÁ, ಕೆಎಂಡಿಸಿ ಅಧ್ಯಕ್ಷ ಬಿ.ಕೆ ಅಲ್ತಾಫ್ ಖಾನ್, ಎಂ.ಡಿ ಮೊಹಮ್ಮದ್ ನಜೀರ್, ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ನಿರ್ದೇಶಕ ಜಿಲಾನಿ ಮೊಕಶಿ, ಹಾಗೂ ಇನ್ನಿತರರು ಉಪಸ್ಥಿತರಿದ್ದರು.