ಕಲಬುರಗಿ: ನವೆಂಬರ್ 22 ರಂದು ಕಲಬುರಗಿ ವಿಮಾನ ನಿಲ್ದಾಣ ಲೋಕಾರ್ಪಣೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಸುಬೋಧ್ ಯಾದವ್ ಅವರು ಗುರುವಾರ ಕಾರ್ಯಕ್ರಮದ ಸಿದ್ಧತೆಗಳ ಪರಿಶೀಲನೆ ನಡೆಸಿದರು.
ಕಾರ್ಯಕ್ರಮದಲ್ಲಿ ಶಾಸಕರು, ಸಂಸದರು, ಗಣ್ಯರು, ಜನಪ್ರತಿನಿಧಿಗಳು, ಸುಮಾರು ೬ ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದ್ದು, ಕುಳಿತುಕೊಳ್ಳಲು ಆಸನ, ಕುಡಿಯುವ ನೀರು, ಊಟದ ವ್ಯವಸ್ಥೆ ಮಾಡಬೇಕೆಂದು ಅವರು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು. ವಿಐಪಿ ಪಾಸ್, ವಿವಿಐಪಿ ಪಾಸ್, ವಾಹನ ಪಾಸ್ ಮುಂತಾದವುಗಳನ್ನು ವಿತರಿಸಲು ಕ್ರಮಕೈಗೊಳ್ಳಬೇಕು ಎಂದು ಅವರು ತಿಳಿಸಿದರು.
ವಿಮಾನ ನಿಲ್ದಾಣಕ್ಕೆ ಭೂಮಿ ನೀಡಿದ ಗ್ರಾಮಸ್ಥರು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದು ಪ್ರಮುಖವಾಗಿ ಪ್ರಸ್ತಾಪಿಸಿದ ಅವರು, ಈ ಮೂಲಕ ಗ್ರಾಮಸ್ಥರಲ್ಲಿ ಸಂತಸದ ಭಾವ ಮೂಡುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಬಿ. ಶರತ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಶಂಕರಪ್ಪ ವಣಿಕ್ಯಾಳ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಪಿ ರಾಜಾ, ಡಿಸಿಪಿ ಕಿಶೋರ್ ಬಾಬು, ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ, ವಿಮಾನ ನಿಲ್ದಾಣದ ನಿರ್ದೇಶಕ ಜ್ಞಾನೇಶ್ವರ ರಾವ್ ಸೇರಿದಂತೆ ಮುಂತಾದವರು ಇದ್ದರು.