ಕಲಬುರಗಿ: ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರ ನಿಧನದಿಂದ ರಾಜ್ಯಾದ್ಯಂತ ಶೋಕಾಚರಣೆ ಜಾರಿಯಲ್ಲಿರುವುದರಿಂದ ರವಿವಾರ ಕಲಬುರಗಿ ನಗರದ ಡಾ.ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನದ ಪ್ರಯುಕ್ತ ವಿಶ್ವಮಾನವ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಕಲಬುರಗಿ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಾಲಾಜಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಶಂಕರಪ್ಪ ವಣಿಕ್ಯಾಳ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುರೇಶ ಬಡಿಗೇರ್, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ವೀರಭದ್ರಪ್ಪ ಸಿಂಪಿ ಸೇರಿದಂತೆ ಗಣ್ಯರು ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವಶರಣಪ್ಪ ಮೂಳೇಗಾಂವ, ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಹಾಗೂ ಕಲಾ ನಿಕಾಯದ ಡೀನ್ ಪ್ರೊ. ಹೆಚ್.ಟಿ. ಪೋತೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಳ್ಳಿ, ಗುಲಬರ್ಗಾ ವಿಶ್ವವಿದ್ಯಾಲಯದ ಮಾಜಿ ಸಿಂಡಿಕೇಟ್ ಸದಸ್ಯ ಪ್ರೊ. ಈಶ್ವರ ಇಂಗಿನ್, ಮಕ್ಕಳ ಸಾಹಿತಿ ಎ.ಕೆ. ರಾಮೇಶ್ವರ, ಸಾಹಿತಿಗಳಾದ ಡಾ. ಸ್ವಾಮಿರಾವ ಕುಲಕರ್ಣಿ, ಡಾ. ಚಿ.ಸಿ. ನಿಂಗಣ್ಣ, ಉಪನ್ಯಾಸಕ ಡಾ. ಶಂಕರ ಬಾಳಿ, ವೆಂಕಟೇಶ ನಿರಡಗಿ, ಎಂ.ಎಸ್. ಪಟ್ಟಣಕರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ-ಸಿಬ್ಬಂದಿಗಳು,ಶಾಲಾ-ಕಾಲೇಜುಗಳ ವಿದ್ಯಾರ್ಥಿ- ವಿದ್ಯಾರ್ಥಿನಿಯರು, ಸಾಹಿತಿಗಳು ಪಾಲ್ಗೊಂಡಿದ್ದರು.
ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರ ನಿಧನದ ಪ್ರಯುಕ್ತ ಇದೇ ಸಂದರ್ಭದಲ್ಲಿ ಸಭಿಕರು ಒಂದು ನಿಮಿಷ ಮೌನಾಚರಣೆ ಮಾಡಿ ಅಗಲಿದ ನಾಡಿನ ಹಿರಿಯ ಆಧ್ಯಾತ್ಮಿಕ ಸಂತನ ಆತ್ಮಕ್ಕೆ ಶಾಂತಿ ಕೋರಲಾಯಿತು.