ಕಲಬುರಗಿ: ಎರಡನೇ ಹಂತದ ಸಂಪುಟದಲ್ಲಿ ಸೇರಿದವರಿಗೆ ಜಿಲ್ಲಾ ಉಸ್ತುವಾರಿ ಸಚಿವರ ಹೊಣೆಯನ್ನು ಕೊಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಿರ್ಧರಿಸಿದ್ದು, ಆ ಹಿನ್ನೆಲೆಯಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ, ಲೋಕೋಪಯೋಗಿ, ಸಮಾಜ ಕಲ್ಯಾಣ ಸಚಿವ ಗೋವಿಂದ್ ಕಾರಜೋಳ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ತೆಗೆದು, ಅವರನ್ನು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮುಂದುವರೆಸುವುದು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ರಾಜ್ಯದ ಇನ್ನೋರ್ವ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರನ್ನು ನೇಮಕ ಮಾಡುವ ಸಾಧ್ಯತೆ ಇದೆ.
ಈ ಹಿಂದೆ ಲಕ್ಷ್ಮಣ್ ಸವದಿ ಅವರು ಬಿ.ಎಸ್. ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಸಹಕಾರ ಸಚಿವರಾಗಿದ್ದಾಗ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದು, ಜಿಲ್ಲೆಯ ಜನಪ್ರತಿನಿಧಿಗಳು ಅವರಿಗೆ ಸಹಕಾರ ನೀಡುವ ಭರವಸೆಯಿಂದ ಅವರನ್ನೇ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿಸುವ ಸಾಧ್ಯತೆ ಹೆಚ್ಚಿದೆ.
ಇನ್ನು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆ, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆನಂದ್‌ಸಿಂಗ್, ಕೊಪ್ಪಳಕ್ಕೆ ಸಚಿವ ಭೈರತಿ ಬಸವರಾಜ್ ಅವರನ್ನು ನೇಮಕ ಮಾಡುವ ಸಂಭವ ಇದೆ.
ಮಂಡ್ಯಕ್ಕೆ ನಾರಾಯಣಗೌಡ, ಬೆಂಗಳೂರು ಗ್ರಾಮಾಂತರಕ್ಕೆ ಆರ್. ಅಶೋಕ್, ಉತ್ತರ ಕನ್ನಡ ಜಿಲ್ಲೆಗೆ ಶಿವರಾಮ್ ಹೆಬ್ಬಾರ್, ಹಾಸನಕ್ಕೆ ಎಸ್.ಟಿ. ಸೋಮಶೇಖರ್, ಕೊಡಗು ಜಿಲ್ಲೆಗೆ ಗೋಪಾಲಯ್ಯ, ಬೆಳಗಾವಿಗೆ ರಾಜ್ಯದ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಹಾವೇರಿ ಜಿಲ್ಲೆಗೆ ಕೃಷಿ ಸಚಿವ ಬಿ.ಸಿ. ಪಾಟೀಲ್, ದಾವಣಗೆರೆ ಜಿಲ್ಲೆಗೆ ರಾಜ್ಯದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಚಿಕ್ಕಬಳ್ಳಾಪೂರಕ್ಕೆ ಸುಧಾಕರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡುವ ಸಾಧ್ಯತೆ ಇದ್ದು, ಸಂಜೆಯ ವೇಳೆಗೆ ಉಸ್ತುವಾರಿಗಳ ಹೆಸರು ಘೋಷಣೆಯಾಗಲಿದೆ.
ಈ ಮಧ್ಯೆ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ್ ಅವರನ್ನು ಬದಲಾವಣೆಯನ್ನು ಮಾಡಿದ್ದೇ ಆದಲ್ಲಿ ಅವರಿಂದ ತೆರವಾದ ಸ್ಥಾನಕ್ಕೆ ರಾಜ್ಯದ ಕಾನೂನು ಹಾಗೂ ಸಂಸದರೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ಇಲ್ಲವೇ ರಾಜ್ಯದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಬೇಕು ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸುಭಾಷ್ ಬಿರಾದಾರ್ ಕಮಲಾಪೂರ್ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.