ಕಲಬುರಗಿ: ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ನೂರಕ್ಕೆ ನೂರು ಅಂಕ ಪಡೆದ ಎಲ್ಲ ಮಾಧ್ಯಮದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರೋತ್ಸಾಹಿಸುವ ಕಾರ್ಯಕ್ರಮವೊಂದಕ್ಕೆ ಕಲಬುರಗಿ ತಾಲೂಕು ಕನ್ನಡ ಸಾಹುತ್ಯ ಪರಿಷತ್ತು ಮುಂದಾಗಿದೆ.
ನಗರದ ಕನ್ನಡ ಭವನದಲ್ಲಿ ಮೇ 21ರಂದು ನೆನಪು ಎಜ್ಯುಕೇಷನ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಂಜೆ 5 ಗಂಟೆಗೆ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಗುವುದು ಎಂದು ತಾಲೂಕು ಕಸಾಪ ಅಧ್ಯಕ್ಷ ಸಿ.ಎಸ್. ಮಾಲಿಪಾಟೀಲ ತಿಳಿಸಿದ್ದಾರೆ.
ಕಸಾಪ 105ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಳ್ಳಿಮಠದ ಗುರುಲಿಂಗ ಶಿವಾಚಾರ್ಯರು ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಬಸವ ಸಮಿತಿ ಅಧ್ಯಕ್ಷೆ ಡಾ. ವಿಲಾಸವತಿ ಖೂಬಾ ಉದ್ಘಾಟಿಸಲಿದ್ದು, ಜಿಲ್ಲಾ ಕಸಾಪ ಅಧ್ಯಕ್ಷ ವೀರಭದ್ರ ಸಿಂಪಿ ಸನ್ಮಾನಿಸಲಿದ್ದಾರೆ. ಇದೇವೇಳೆಯಲ್ಲಿ ಕಸಾಪ ನಡೆದು ಬಂದ ದಾರಿ ಕುರಿತು ಡಾ. ಭೀಮರಾವ ಅರಕೇರಿ ಉಪನ್ಯಾಸ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
ಸಿ.ಎಸ್. ಮಾಲಿ ಪಾಟೀಲ ಅಧ್ಯಕ್ಷತೆ ವಹಿಸಲಿದ್ದು, ಎ.ಕೆ. ರಾಮೇಶ್ವರ, ಡಾ. ಲಕ್ಷ್ಮಣ ಕೌಂಟೆ, ಟಿ.ಸಿ. ಮಾಲಿಪಾಟೀಲ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.