ಕಲಬುರಗಿ: ಕೋವಿಡ್-೧೯ ಸೋಂಕು ಹಿನ್ನೆಲೆಯಲ್ಲಿ ಮಾಸ್ಕ್, ಸ್ಯಾನಿಟೈಸರ್ ನಂತಹ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಯಾವುದೇ ಲೋಪವಾಗದಂತೆ ಜಿಲ್ಲೆಯಲ್ಲಿ ಆಗಸ್ಟ್ ೧೫ ರಂದು ಈ ಬಾರಿ ಸ್ವಾತಂತ್ರ್ಯೋತ್ಸವ ಆಚರಿಸುವಂತೆ ಜಿಲ್ಲಾಧಿಕಾರಿ ಶರತ್. ಬಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಂಜೆ ನಡೆದ ೭೪ನೇ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡುತ್ತಿದ್ದರು.
ಸಮಾರಂಭದಲ್ಲಿ ಹೆಚ್ಚು ಜನರು ಸೇರಬಾರದು, ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಬರಬೇಕು. ಸ್ಥಳದಲ್ಲಿ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರಬೇಕು. ಸ್ವಾತಂತ್ರ್ಯ ದಿನಾಚರಣೆ ಸಂಬಂಧ ಕೇಂದ್ರ ಗೃಹ ಮಂತ್ರಾಲಯ ನೀಡಿರುವ ನಿರ್ದೇಶನಗಳನ್ನು ಚಾಚೂತಪ್ಪದೆ ಪಾಲಿಸಬೇಕು ಎಂದು ಅವರು ತಿಳಿಸಿದರು.
ಕೊರೋನಾ ವೈರಸ್ ಸೋಂಕು ಹರಡುವಿಕೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಯಾವುದೇ ಶಾಲಾ ಮಕ್ಕಳನ್ನು ಸಮಾರಂಭಕ್ಕೆ ಕರೆತರಬಾರದು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಎನ್‌ಸಿಸಿ, ಸ್ಕೌಟ್ಸ್, ಹೋಂ ಗಾರ್ಡ್ ಹಾಗೂ ಪೊಲೀಸ್ ತಂಡಗಳ ಪಥಸಂಚನ ಮಾತ್ರ ನಡೆಸಬೇಕು. ಈ ಸಂಬಂಧ ಮೊದಲೇ ರಿಹರ್ಸಲ್ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಅವರು ಹೇಳಿದರು.
ಈ ಬಾರಿ ಕೋವಿಡ್-೧೯ ಸಂಬಂಧಿದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸ್ತಬ್ಧ ಚಿತ್ರಗಳನ್ನು ತಯಾರಿಸಬೇಕು. ಆರೋಗ್ಯ ಇಲಾಖೆ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಾರಿಗೆ ಇಲಾಖೆಗಳು ತಮ್ಮ ಇಲಾಖೆಗಳಲ್ಲಿ ಕೋವಿಡ್ ಸಂಬಂಧಿಸಿದ ಯೋಜನೆ/ಕ್ರಮಗಳ ಕುರಿತ ಟ್ಯಾಬ್ಲೋ ನಿರ್ಮಿಸಬೇಕು ಎಂದು ಅವರು ಸಲಹೆ ನೀಡಿದರು.
ಜಿಲ್ಲಾ ಕೇಂದ್ರದಲ್ಲಿ ಎಲ್ಲಾ ಕಚೇರಿಗಳಲ್ಲಿ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗದವರು ಆಗಸ್ಟ್ ೧೫ ರಂದು ಬೆಳಿಗ್ಗೆ ೭.೩೦ಕ್ಕೆ ಧ್ವಜಾರೋಹಣ ಮಾಡಬೇಕು. ನಂತರ ನಗರದ ಪೊಲೀಸ್ ಗ್ರೌಂಡ್‌ನಲ್ಲಿ ನಡೆಯುವ ಪ್ರಧಾನ ಕಾರ್ಯಕ್ರಮಕ್ಕೆ ಅಂದು ಬೆಳಿಗ್ಗೆ ೮.೩೦ರೊಳಗಾಗಿ ಬಂದು ಸೇರಬೇಕು. ಇಲ್ಲಿ ಸರಿಯಾಗಿ ಬೆಳಿಗ್ಗೆ ೯ ಗಂಟೆಗೆ ಧ್ವಜಾರೋಹಣ ನೆರವೇರಿಸಲಾಗುವುದು ಎಂದು ಅವರು ಹೇಳಿದರು.
ಕೋವಿಡ್-೧೯ ಹಿನ್ನೆಲೆಯಲ್ಲಿ ದುಡಿಯುತ್ತಿರುವ ವೈದ್ಯರು, ನರ್ಸ್, ಪೌರಕಾರ್ಮಿಕರು ಹಾಗೂ ಕೋವಿಡ್ ನಿಂದ ಗುಣಮುಖರಾದ ರೋಗಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು. ಈ ಕುರಿತು ಪಟ್ಟಿ ನೀಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ಸ್ವಾತಂತ್ರ್ಯ ದಿನಾಚರಣೆಯಂದು ಪ್ಲಾಸ್ಟಿಕ್ ಧ್ವಜಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ಮಾರಾಟ ಮಾಡಿದಲ್ಲಿ ಅಂತಹ ಅಂಗಡಿಗಳನ್ನು ಲೈಸನ್ಸ್ ರದ್ದುಪಡಿಸುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ಅವರು ಇದೇ ಸಂದರ್ಭದಲ್ಲಿ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಪಿ. ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿಮಿ ಮರಿಯಂ ಜಾರ್ಜ್, ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ, ಅಪರ ಜಿಲ್ಲಾಧಿಕಾರಿ ಡಾ. ಶಂಕರ್ ವಣಿಕ್ಯಾಳ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.