ದಾಬಸ್ ಪೇಟೆ: ಕೈಗಾರಿಕಾ ಪ್ರದೇಶಗಳಲ್ಲಿ ಕೈಗಾರಿಕೋದ್ಯಮಿಗಳು ಎದುರಿಸುತ್ತಿರುವ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳಿ ಎಂದು ಬೃಹತ್ ಮತ್ತು ಕೈಗಾರಿಕಾ ಸಚಿವರಾದ ಶ್ರೀ ಜಗದೀಶ ಶೆಟ್ಟರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ದಾಬಸ್ ಪೇಟೆಯಲ್ಲಿ ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿಯ ವತಿಯಿಂದ ಅಭಿವೃದ್ದಿ ಪಡಿಸಲಾಗಿರುವ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿದ ಅವರು, ಹಲವಾರು ಕಾರ್ಖಾನೆಗಳಿಗೆ ಭೇಟಿ ನೀಡಿ ಕೈಗಾರಿಕೋದ್ಯಮಿಗಳೊಂದಿಗೆ ಚರ್ಚೆ ನಡೆಸಿದರು.
ದಾಬಸ್‌ಪೇಟೆ ಇಂಡಸ್ಟ್ರೀಸ್ ಅಸೋಸಿಯೇಷನ್ ಸದಸ್ಯರು ನೀಡಿದ ಮನವಿ ಪತ್ರವನ್ನು ಸ್ವೀಕರಿಸಿ ಮಾತನಾಡಿದ ಸಚಿವರು, ಕೈಗಾರಿಕೆಗಳಿಗೆ ಭೂಮಿಯನ್ನು ನೀಡುವುದರ ಜೊತೆಯಲ್ಲಿಯೇ ಅಗತ್ಯವಿರುವ ವಿದ್ಯುತ್ ಸರಬರಾಜು, ನೀರು, ಸುರಕ್ಷತೆ ಹಾಗೂ ಇನ್ನಿತರೆ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ದಿಪಡಿಸುವುದು ಮಂಡಳಿಯ ಕರ್ತವ್ಯವಾಗಿದೆ. ಆಗ ಮಾತ್ರ ಕೈಗಾರಿಕೆಗಳು ಸುಲಭವಾಗಿ ತಮ್ಮ ಉತ್ಪಾದನೆಯನ್ನು ಪ್ರಾರಂಭಿಸಿ ಸ್ಥಳೀಯರಿಗೆ ಉದ್ಯೋಗಾವಕಾಶ ಹಾಗೂ ರಾಜ್ಯದ ಆರ್ಥಿಕತೆಗೆ ಕೊಡುಗೆಯನ್ನು ನೀಡಲು ಸಾಧ್ಯ. ಈ ನಿಟ್ಟಿನಲ್ಲಿ ದಾಬಸ್‌ಪೇಟೆಯ ಕೈಗಾರಿಕೋದ್ಯಮಿಗಳು ನೀಡಿರುವ ಬೇಡಿಕೆಗಳನ್ನು ತುರ್ತಾಗಿ ಪರಿಹರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಲ್ಲದೆ, ಈ ಭಾಗದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಭೂಮಿಯ ಬೇಡಿಕೆ ಹೆಚ್ಚಿರುವುದರಿಂದ ಮಂಡಳಿಯ ವತಿಯಿಂದ ಸ್ವಾಧೀನ ಪಡಿಸಿಕೊಂಡಿರುವ ಭೂಮಿಯನ್ನು ಅಭಿವೃದ್ದಿಗೊಳಿಸಿ ಹಂಚಿಕೆಯನ್ನು ಮಾಡುವ ಕಾರ್ಯಕ್ಕೂ ವೇಗಗೊಳಿಸಬೇಕಾಗಿದೆ ಎಂದು ಸಚಿವರು ಸೂಚನೆ ನೀಡಿದರು.
ಭೇಟಿಯ ಸಂಧರ್ಭದಲ್ಲಿ ತ್ರಿವೇಣಿ ಟ್ರೀಬ್ಯೂನ್ ಮತ್ತು ಕೆಬಿಡಿ ಕಲ್ಪತರು ಕಂಪನಿಗಳಿಗೆ ಭೇಟಿ ನೀಡಿ ಕೋವಿಡ್ ಮಹಾಮಾರಿಯನ್ನು ತಡೆಗಟ್ಟಲು ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು. ಸಚಿವರ ಜೊತೆಯಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿಯ ಸಿಇಒ ಡಾ ಶಿವಶಂಕರ್ ಸೇರಿದಂತೆ ಹಲವು ಪ್ರಮುಖ ಅಧಿಕಾರಿಗಳು ಪಾಲ್ಗೊಂಡಿದ್ದರು.