ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಸರ್ಕಾರವು ಹೆಚ್ಚಿನ ಪ್ರಮಾಣದಲ್ಲಿ ಅನುದಾನ ಬಿಡುಗಡೆ ಮಾಡುತ್ತಿದ್ದು, ಅಧಿಕಾರಿಗಳು ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸುವುರ ಮೂಲಕ ಸರಕಾರ ನೀಡುವ ಅನುದಾನವನ್ನು ಸಂಪೂರ್ಣವಾಗಿ ಬಳಸಿಕೊಂಡು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಶ್ರಮಿಸಬೇಕು ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ಸಿ. ರೇವೂರ್ ಅವರು ಸೂಚನೆ ನೀಡಿದರು.
ನಗರದ ಕೆಕೆಆರ್‍ಡಿಬಿ ಕಚೇರಿಯಲ್ಲಿ ಸೋಮವಾರ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದರು.
ಕೆಕೆಆರ್‍ಡಿಬಿ ಕಾಮಗಾರಿಗಳ ಕುರಿತು ಈ ಭಾಗದ ಅಧಿಕಾರಿಗಳು ವಿಶೇಷವಾಗಿ ಗಮನಹರಿಸಬೇಕು ಮತ್ತು ಆಸ್ತಕಿಯಿಂದ ಕೆಲಸ ಮಾಡಬೇಕು. ಅಂದಾಗ ಮಾತ್ರ ಪ್ರಗತಿ ಹೊಂದಿ ಇನ್ನೂ ಹಲವಾರು ಅಭಿವೃದ್ಧಿ ಯೋಜನೆಗಳ ಮಾಡಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳು ಪ್ರತಿಯೊಂದು ಮಾಹಿತಿಯನ್ನು ಅಪ್‍ಡೇಟ್ ಮಾಡಬೇಕು. ಯಾವುದೇ ಅಡೆ-ತಡೆ ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿ ಸಮಸ್ಯೆ ಬಗೆಹರಿಸಿಕೊಂಡು ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಅವರು ಸೂಚಿಸಿದರು.
ಬಾಕಿಯಿರುವ ಕಾಮಗಾರಿಗಳ ಬಗ್ಗೆ ಪ್ರತಿ ಹಂತದಲ್ಲೂ ಮಂಡಳಿಗೆ ಮಾಹಿತಿ ನೀಡಬೇಕು ಎಂದ ಅವರು, ಜೇವರ್ಗಿ ತಾಲ್ಲೂಕಿನ ನಿರ್ಮಿತಿ ಕೇಂದ್ರದಲ್ಲಿ ನಡೆದ ಅವ್ಯವಹಾರದ ಕುರಿತು ತನಿಖೆಗೆ ನಡೆಸಲು ಜಿಲ್ಲಾಡಳಿತಕ್ಕೆ ಪತ್ರ ಬರೆಯುವುದಾಗಿ ಅವರು ತಿಳಿಸಿದರು.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಮತ್ತು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಡಾ. ಎನ್. ವಿ. ಪ್ರಸಾದ್, ಜಿಲ್ಲಾಧಿಕಾರಿ ವಿ. ವಿ. ಜೋತ್ಸ್ನಾ, ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪಿ. ರಾಜಾ, ಕೆಕೆಆರ್‍ಡಿಬಿ ಉಪ ಕಾರ್ಯದರ್ಶಿ ಡಾ. ಬಿ. ಸುಶೀಲಾ, ಜಂಟಿ ನಿರ್ದೇಶಕಿ ಪ್ರವೀಣ ಪ್ರಿಯಾ ಎನ್ ಡೇವಿಡ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.