ಕಲಬುರಗಿ: ಮಾನಸಿಕ ಖಿನ್ನತೆಗೊಳಗಾದ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕಲಬುರಗಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿಗಳಾದ ಡಾ. ರಾಜಕುಮಾರ ಅವರು ತಿಳಿಸಿದ್ದಾರೆ.
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೇಂದ್ರ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆ ಕಲಬುರಗಿ ಇವುಗಳ ಸಹಯೋಗದೊಂದಿಗೆ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಶನಿವಾರದಂದು ಬಂದಿಗಳಿಗೆ ಏರ್ಪಡಿಸಲಾಗಿದ್ದ ಮಾನಸಿಕ ಆರೋಗ್ಯದ ಅರಿವಿನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ಕಲಬುರಗಿ ಆರೋಗ್ಯ ಇಲಾಖೆ ಮನೋರೋಗ ತಜ್ಞರಾದ ಡಾ. ಶ್ರೀಕಾಂತ ಮಾತನಾಡಿ ಮಾನಸಿಕವಾಗಿ ಬಳಲುತ್ತಿರುವವರನ್ನು ಪತ್ತೆ ಹಚ್ಚಿ, ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಕಾರಾಗೃಹದ ಬಂದಿಗಳು ಇದರ ಪ್ರಯೋಜನ ಪಡೆಯಬೇಕೆಂದರು.
ಕಾರ್ಯಕ್ರಮದಲ್ಲಿ ಇನ್ನೋರ್ವ ಮುಖ್ಯ ಅತಿಥಿಗಳಾಗಿ ಆರೋಗ್ಯ ಇಲಾಖೆಯ ಮನೋರೋಗ ತಜ್ಞರಾದ ಡಾ. ಸುಧಾರಾಣಿ ಮಾತನಾಡಿ, ಪ್ರತಿಯೊಬ್ಬರು ಮಾನಸಿಕ ಒತ್ತಡದ ಕುರಿತು ಅರಿವು ಹೊಂದಿ, ಉತ್ತಮ ಆರೋಗ್ಯದ ಕಡೆ ಗಮನ ಹರಿಸಬೇಕು. ಉತ್ತಮ ಆರೋಗ್ಯಕ್ಕಾಗಿ ಪ್ರತಿಯೊಬ್ಬರು ಕನಿಷ್ಠ 6 ರಿಂದ 8 ಗಂಟೆಗಳ ಕಾಲ ನಿದ್ರೆ ಮಾಡುವ ರೂಢಿ ಬೆಳೆಸಿಕೊಳ್ಳಬೇಕೆಂದು ಹೇಳಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಲಬುರಗಿ ಕೇಂದ್ರ ಕಾರಾಗೃಹ ಮುಖ್ಯ ಅಧೀಕ್ಷಕ ಪಿ. ಎಸ್. ರಮೇಶ ಮಾತನಾಡಿ, ದೈಹಿಕ ಆರೋಗ್ಯ ಎಷ್ಟು ಮುಖ್ಯವೋ ಮಾನಸಿಕ ಆರೋಗ್ಯವೂ ಅಷ್ಟೇ ಮುಖ್ಯವಾಗಿದೆ. ಕೇಂದ್ರ ಕಾರಾಗೃಹದಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ ಮತ್ತಿತರ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿ ಹೆಚ್ಚೆಚ್ಚು ಹಮ್ಮಿಕೊಳ್ಳಲಾಗುವುದೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಕಲಬುರಗಿ ಕೇಂದ್ರ ಕಾರಾಗೃಹದ ಹಿರಿಯ ವೈದ್ಯಾಧಿಕಾರಿ ಡಾ|| ಬಸವರಾಜ ಕಿರಣಗಿ ಅವರು ರಾಷ್ಟ್ರೀಯ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಕೇಂದ್ರ ಕಾರಾಗೃಹದಲ್ಲಿ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಎಲ್ಲಾ ಬಂದಿ ನಿವಾಸಿಗಳು ಸದುಪಯೋಗವನ್ನು ಪಡೆಯಬೇಕೆಂದು ಹೇಳಿದರು.
ಶಿಕ್ಷಕ ನಾಗರಾಜ ಮುಲಗೆ ಕಾರ್ಯಕ್ರಮದ ನಿರೂಪಿಸಿದರು. ಸಹಾಯಕ ಆಡಳಿತಾಧಿಕಾರಿ ಶ್ರೀದೇವಿ ಪಂಡಿತ ಪ್ರಾರ್ಥನಾ ಗೀತೆ ಹಾಡಿದರು. ಸಹಾಯಕ ಅಧೀಕ್ಷಕ ವಿ. ಕೃಷ್ಣಮೂರ್ತಿ ಸ್ವಾಗತಿಸಿದರು. ಜೈಲರ್ ಗೋಪಾಲಕೃಷ್ಣ ಕುಲಕರ್ಣಿ ವಂದಿಸಿದರು.