ಕಲಬುರಗಿ: ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಮಹಾನಗರ ಪಾಲಿಕೆಯ ಪೌರ ಕಾರ್ಮಿಕರಿಗೆ ಎಲ್ಲರೂ ಗೌರವದಿಂದ ಕಾಣಬೇಕೆಂದು ಕಲಬುರಗಿ ಮಹಾನಗರ ಪಾಲಿಕೆಯ ಮಾಜಿ ಮಹಾಪೌರರಾದ ಡಾ. ಶರಣುಕುಮಾರ ಎಂ.ಮೋದಿ ಅವರು ಹೇಳಿದರು.
ಅವರು ರವಿವಾರ ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟ (ರಿ) ಹಾಗೂ ಶಿವಂ ಸೇವಾ ಸಂಸ್ಥೆ ಇವುಗಳ ಸಂಯುಕ್ತಾಶ್ರಯದಲ್ಲಿ ಕಲಬುರಗಿ ನಗರದ ಸರ್ಕಾರಿ ಬಾಲಕರ ಬಾಲಮಂದಿರ ಆವರಣದಲ್ಲಿ ಏರ್ಪಡಿಸಲಾಗಿದ್ದ “ಸ್ವಚ್ಛ ಕಲಬುರಗಿ ಕುರಿತು ಸಾರ್ವಜನಿಕರಲ್ಲಿ ಜಾಗೃತಿ” ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಹಾನಗರ ಪಾಲಿಕೆಯ ಪೌರಕಾರ್ಮಿಕರು ಬಡಾವಣೆಗೆ ಬಂದಾಗ ಸಾರ್ವಜನಿಕರು ಅವರಿಗೆ ಹಸಿ ಹಾಗೂ ಒಣ ಕಸವನ್ನು ಬೇರ್ಪಡಿಸಿ ನೀಡುವ ಮೂಲಕ ಪಾಲಿಕೆಗೆ ಸಹಕರಿಸಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡಲು ಅನುಕೂಲವಾಗುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದರು.
ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಮಲ್ಲಮ್ಮ ಎ. ಕಡ್ಲಾ ಅವರು ಪ್ರಸ್ತಾವಿಕವಾಗಿ ಮಾತನಾಡಿ, ನಮ್ಮ ಸುತ್ತಮುತ್ತಲೂ ಸ್ವಚ್ಛತೆ ಕಾಪಾಡಿಕೊಳ್ಳದೇ ಇರುವುದರಿಂದ ಅನೇಕ ರೋಗಗಳು ಹರಡಲು ಕಾರಣವಾಗುತ್ತದೆ. ಎಲ್ಲರೂ ತಮ್ಮ ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕೆಂದರು.
ಶಿವಂ ಸೇವಾ ಸಂಸ್ಥೆಯ ಅಧ್ಯಕ್ಷೆ ಸಿದ್ದಮ್ಮಾ ಎಂ. ಗೌನಳ್ಳಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನೀಲಮ್ಮನ ಬಳಗದ ಅಧ್ಯಕ್ಷೆ ಜಯಶ್ರೀ ಚಟ್ನಳ್ಳಿ ಅವರು ವಿಶೇಷ ಉಪನ್ಯಾಸ ನೀಡಿದರು.
ಕಲಬುರಗಿ ದರ್ಗಾ ಶಾಖೆ ಇಂಡಿಯನ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕರಾದ ರಮಾ ಎಸ್. ಸಣ್ಣೂರಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯ ವಿಷಯ ನಿರ್ವಾಹಕರಾದ ಅರುಣಾ ಗೋಟುರ, ನಿಸರ್ಗಾ ಸೇವಾ ಸಂಸ್ಥೆಯ ನಿರ್ದೇಶಕಿ ದಿವ್ಯ, ಸರ್ಕಾರಿ ಬಾಲಕರ ಬಾಲ ಮಂದಿರದ ಅಧೀಕ್ಷಕಿ ಸತ್ಯವ್ವ ನಾರಾಯಣರಾವ ಉಪಸ್ಥಿತರಿದ್ದರು.
ಇಬ್ಬರು ಪೌರಕಾರ್ಮಿಕರಿಗೆ ಸನ್ಮಾನ: ಇದೇ ಸಂದರ್ಭದಲ್ಲಿ ಪಾಲಿಕೆಯ ಮಹಿಳಾ ಪೌರ ಕಾರ್ಮಿಕರಾದ ಶಶಿಕಲಾ ಹಾಗೂ ಪಾರ್ವತಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಸರ್ಕಾರಿ ಬಾಲಕರ ಬಾಲಮಂದಿರ ಆವರಣದಲ್ಲಿ ಗಿಡ ನೆಡಲಾಯಿತು.