ಕಲಬುರಗಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕಚೇರಿ ಸ್ನಾತಕೋತ್ತರ ಕೇಂದ್ರ ಕಲಬುರಗಿ ಇವುಗಳ ಸಹಯೋಗದೊಂದಿಗೆ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕಲಬುರಗಿ ಜಿಲ್ಲಾ ಶಾಖೆಯಿಂದ ವಿ.ಟಿ.ಯು. ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಗಿದ್ದ ಲಸಿಕೆ ಹಾಕುವ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಶರಣಬಸಪ್ಪ ಗಣಜಲಖೇಡ ಅವರು ಶನಿವಾರ ಉದ್ಘಾಟಿಸಿದರು.
ನಂತರ ಅವರು ಮಾತನಾಡಿ, ಕೋವಿಡ್ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಎಲ್ಲರೂ ಲಸಿಕೆ ಹಾಕಿಸಿಕೊಳ್ಳುವುದು ಅವಶ್ಯಕವಾಗಿದೆ. ಆದ್ದರಿಂದ ರಾಜ್ಯ ಸರ್ಕಾರವು ಎಲ್ಲರಿಗೂ ಉಚಿತವಾಗಿ ಕೋವಿಡ್ ಲಸಿಕೆ ನೀಡುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು.
ಕಲಬುರಗಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಗೌರವ ಕಾರ್ಯದರ್ಶಿ ರವೀಂದ್ರ ಶಾಬಾದಿ ಅವರು ಮಾತನಾಡಿ, ಜಿಲ್ಲೆಯ ಎಲ್ಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಲಸಿಕೆ ಹಾಕಲು ವ್ಯವಸ್ಥೆ ಮಾಡಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಮನವಿ ಮಾಡಿದಲ್ಲದೇ ಈ ಲಸಿಕೆ ಕಾರ್ಯಕ್ರಮ ಆಯೋಜಿಸಿದ್ದಕ್ಕಾಗಿ ವಿ.ಟಿ.ಯು ಹಾಗೂ ಆರೋಗ್ಯ ಇಲಾಖೆಯವರಿಗೆ ಅಭಿನಂದನೆ ಸಲ್ಲಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಕಲಬುರಗಿ ವಿಶ್ವೇಶ್ವರಯ್ಯಾ ತಾಂತ್ರಿಕ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದ ನಿರ್ದೆಶಕರಾದ ಡಾ. ಬಸವರಾಜ ಗಾದಗೆ ಮಾತನಾಡಿ, ಯುವಕರಲ್ಲಿ ಕೋವಿಡ್ ಲಸಿಕೆ ಕುರಿತು ಜಾಗೃತಿ ಮೂಡಿಸುವ ಅವಶ್ಯತೆಯಿದೆ ಎಂದರು.
ಕಲಬುರಗಿ ಖ್ಯಾತ ವೈದ್ಯರಾದ ಡಾ. ಮಲ್ಲಾರರಾವ್ ಮಲ್ಲೆ ಮಾತನಾಡಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದ್ದು, ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.
ಕಲಬುರಗಿ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಉಪ ಸಭಾಪತಿಗಳಾದ ಅರುಣಕುಮಾರ ಲೋಯಾ, ಧನರಾಜ ಭಾಸಗಿ, ಜಿ.ಎಸ್.ಪದ್ಮಾಜಿ, ಶಿವರಾಜ ಅಂಡಗಿ, ಕಾಲೇಜಿನ ಪ್ರಾಧ್ಯಾಪಕರಾದ ಡಾ. ಶಂಭುಲಿಂಗಪ್ಪ, ಡಾ. ಶಿವರಾಮನಗೌಡ, ಡಾ. ಶರಣಗೌಡ ಬಿರಾದಾರ, ಡಾ. ಸಂಜಯ ಪಟ್ಟಣಶೆಟ್ಟಿ, ಡಾ. ಶುಭಾಂಗಿ ಪಾಟೀಲ, ಬೋಧಕ ಮತು ್ತ ಬೋಧಕೇತರ ಸಿಬ್ಬಂದಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸುಮಾರು 250 ಜನ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಲಸಿಕೆ ನೀಡಲಾಯಿತು.