ಕಲಬುರಗಿ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಡುಗೆ ಎಣ್ಣೆ ಸೇರೀದಂತೆ ಜೀವನಾವಶ್ಯ ವಸ್ತುಗಳ ಬೆಲೆ ಇಂದು ಗಗನಕ್ಕೇರಿದೆ. ಬಿಜೆಪಿ ನೇತೃತ್ವದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳೆರಡೂ ಸೇರಿಕೊಂಡು ಜನರನ್ನು ಲೂಟಿ ಮಾಡುತ್ತಿವೆ ಎಂದು ಮಾಜಿ ಸಚಿವರಾದ ಶಾಸಕರಾದ ಹಾಗೂ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರನಲ್ಲಿ ನಡೆಸಿರುವ ಪ್ರತಿಭಟನೆಯನ್ನು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಕೋವಿಡ್ ಹಾಗೂ ಲಾಕ್‌ಡೌನ್‌ನಿಂದಾಗಿ ಈಗಾಗಲೇ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಜನರ ಗಾಯದ ಮೇಲೆ ಈ ಸರ್ಕಾರಗಳು ಬರೆ ಎಳೆಯುತ್ತಿವೆ. ಇದರಿಂದಾಗಿ ಸಾಮಾನ್ಯ ಜನರು ಇಂದು ಜೀವನ ನಡೆಸುವುದೇ ದುಸ್ತರವಾಗಿದೆ.
ನಿರುದ್ಯೋಗ ಹಾಗೂ ವ್ಯಾಪಾರ ನಷ್ಟದಿಂದ ಜನರು ಈಗಾಗಲೇ ಸಂಕಷ್ಟ ಅನುಭವಿಸುತ್ತಿದ್ದಾರೆ. ಅಂತಹ ಜನರ ಜೇಬಿಗೇ ಕೈ ಹಾಕಿ ಕೇಂದ್ರ & ರಾಜ್ಯ ಬಿಜೆಪಿ ಸರ್ಕಾರಗಳು ಲೂಟಿ ಮಾಡುತ್ತಿದೆ. ಈ ಲಜ್ಜೆಗೆಟ್ಟ ಬಿಜೆಪಿ ಸರ್ಕಾರ ಜನ ವಿರೋಧಿ ನೀತಿಗಳನ್ನು ಕೈ ಬಿಡದಿದ್ದಲ್ಲಿ, ಇನ್ನಷ್ಟು ತೀವ್ರ ತರದಲ್ಲಿ ಕಾಂಗ್ರೆಸ್ ಪಕ್ಷದ ಪ್ರತಿಭಟನೆಯನ್ನು ಎದುರಿಸಬೇಕಾಗುತ್ತದೆ ಎಂದು ಈ ಮೂಲಕ ಎಚ್ಚರಿಸುತ್ತಿದ್ದೇವೆ ಎಂದಿದ್ದಾರೆ.
ಈ ಹಿನ್ನೆಲೆಯಲ್ಲಿ ಜನರ ಆಕ್ರೋಶವನ್ನು ಸರ್ಕಾರಕ್ಕೆ ತಲುಪಿಸುವ ನಿಟ್ಟಿನಲ್ಲಿ, ಇಂದು ಸದನಕ್ಕೆ ಎತ್ತಿನ ಗಾಡಿಯ ಮೂಲಕ ತೆರಳಿ ಪ್ರತಿಭಟನೆ ನಡೆಸಲಾಯಿತು.
ಕೆಪಿಸಿಸಿ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ವಿರೋಧಪಕ್ಷದ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್, ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ ಸೇರಿದಂತೆ ಎಲ್ಲಾ ಶಾಸಕರು ಹಾಗೂ ಸಂಸದರು ಭಾಗವಹಿಸಿದ್ದರು.