ಭಾಲ್ಕಿ: ತಾಲೂಕಿನ ಕರಡ್ಯಾಳ ಶ್ರೀ ಚನ್ನಬಸವೇಶ್ವರ ಗುರುಕುಲ ಪದವಿ ಪೂರ್ವ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಜೆಇಇ(ಮೇನ್ಸ್) ಆರ್ಕಿಟೆಕ್ಚರ್ ವಿಭಾಗದಲ್ಲಿ ಉತ್ತಮ ರ್ಯಾಂಕ್ ಪಡೆದು ಗಡಿ ಭಾಗದಲ್ಲಿ ಪ್ರತಿಭೆಗಳಿಗೆ ಕೊರತೆ ಇಲ್ಲ ಎನ್ನುವುದು ಸಾಬೀತು ಪಡಿಸಿದ್ದಾರೆ. ವಿದ್ಯಾರ್ಥಿ ಕೇದಾರ್ ಸುರೇಶಬಾಬು ರಾಷ್ಟ್ರಮಟ್ಟದಲ್ಲಿ 207ನೇ ರ್ಯಾಂಕ್ ಪಡೆದು ಹುಬ್ಬೆರಿಸುವಂತಹ ಸಾಧನೆ ಮಾಡಿದ್ದಾನೆ.
ಉಳಿದಂತೆ ವಿದ್ಯಾರ್ಥಿ ಶ್ರೀಧರರೆಡ್ಡಿ ಡಿಗಂಬರರೆಡ್ಡಿ, 435, ನಾಗರಾಜ ಹಾಲಿಮನಿ 723 ಮತ್ತು ವೈಷ್ಣವಿ ಚಂದ್ರಕಾಂತ 995ನೇ ರ್ಯಾಂಕ್ ಪಡೆದು ರಾಷ್ಟ್ರಮಟ್ಟದಲ್ಲಿ ಉತ್ತಮ ಸಾಧನೆ ತೋರಿದ್ದಾರೆ ಎಂದು ಪ್ರಾಚಾರ್ಯ ಬಸವರಾಜ ಮೊಳಕೀರೆ ತಿಳಿಸಿದ್ದಾರೆ. ಈಗಾಗಲೇ ಜೆಇಇ ಮೇನ್ಸ್, ಸಿಇಟಿಯಲ್ಲಿಯು ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ರ್ಯಾಂಕ್ ಪಡೆದು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಮಿಂಚಿದ್ದಾರೆ. ಬರುವ ನೀಟ್ ಪರೀಕ್ಷೆಯ ಫಲಿತಾಂಶದಲ್ಲಿಯು ಕೂಡ ಸಂಸ್ಥೆಯ ನೂರಾರು ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲಿ ಉತ್ತಮ ರ್ಯಾಂಕ್ ಪಡೆಯುವ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ಹರ್ಷ : ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು, ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಕಾರ್ಯದರ್ಶಿ ಮಹಾಲಿಂಗ ಸ್ವಾಮೀಜಿ, ಆಡಳಿತಾಧಿಕಾರಿ ಮೋಹನ ರೆಡ್ಡಿ, ಪ್ರಾಚಾರ್ಯ ಬಸವರಾಜ ಮೊಳಕೀರೆ, ಉಪ ಪ್ರಾಚಾರ್ಯ ಸಿದ್ರಾಮ ಗೊಗ್ಗಾ ಸೇರಿದಂತೆ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತ ಪಡಿಸಿದ್ದಾರೆ.
ಗಡಿ ಭಾಗ ಮತ್ತು ಗ್ರಾಮೀಣ ಭಾಗದ ಅದರಲ್ಲಿಯು ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ಉತ್ತಮ ರ್ಯಾಂಕ್ ಪಡೆಯುತ್ತಿರುವುದು ಹೆಮ್ಮೆ ತರಿಸಿದೆ. ಬೋಧಕರ ಪರಿಣಾಮಕಾರಿ ಬೋಧನೆ ಮತ್ತು ವಿದ್ಯಾರ್ಥಿಗಳ ನಿರಂತರ ಪ್ರಯತ್ನದಿಂದ ಈ ಸಾಧನೆ ಸಾಧ್ಯವಾಗಿದೆ. ರ್ಯಾಂಕ್ ಪಡೆದ ಎಲ್ಲ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. – ಗುರುಬಸವ ಪಟ್ಟದ್ದೇವರು ಹಿರೇಮಠ ಸಂಸ್ಥಾನ ಭಾಲ್ಕಿ