ಕಲಬುರಗಿ: ದೇಶದ ಒಟ್ಟು ಜನಸಂಖ್ಯೆಯಲ್ಲಿ ಕಡಿಮೆ ಸಂಖ್ಯೆಯಲ್ಲಿ ಕಂಡುಬರುವ ಜನರೆ ಅಲ್ಪಸಂಖ್ಯಾತರಾಗಿದ್ದಾರೆ. ಅವರ ಸರ್ವತೋಮುಖ ಬೆಳವಣಿಗೆಗೆ ಸಂವಿಧಾನ, ಕಾನೂನುಗಳು ಅವರಿಗೆ ಹಕ್ಕುಗಳನ್ನು ನೀಡಿದ್ದು, ಅವುಗಳಿಗೆ ತೊಂದರೆಯಾಗದಂತೆ ರಕ್ಷಣೆ ಮಾಡಿದರೆ, ಅಲ್ಪಸಂಖ್ಯಾತರ ರಕ್ಷಣೆ ಸಾಧ್ಯವಾಗುತ್ತದೆ ಎಂದು ಮಹಿಳಾ ಚಿಂತಕಿ ಬಿಸ್ಮಿಲ್ಲಾ ಐ.ಅತ್ತರ್ ಹೇಳಿದರು.
ನಗರದ ಆಳಂದ ರಸ್ತೆಯ ಜೆ.ಆರ್. ನಗರದಲ್ಲಿರುವ ’ಕೊಹಿನೂರ ಕಂಪೂಟರ್ ಹಾಗೂ ಅಬಾಕಸ್ ತರಬೇತಿ ಕೇಂದ್ರ, ಸ್ಪೋಕನ್ ಇಂಗ್ಲೀಷ್ ಅಕಾಡೆಮಿ’ಯಲ್ಲಿ ’ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಸೋಮವಾರ ಏರ್ಪಡಿಸಲಾಗಿದ್ದ ’ಮುಸ್ಲಿಂ ಮಹಿಳೆಯರ ಹಕ್ಕುಗಳ ದಿನಾಚರಣೆ’ಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತ ಮಹಿಳೆಯರಿಗೆ ದೊರೆಯಬೇಕಾದ ಸೌಲಭ್ಯಗಳನ್ನು ಒದಗಿಸಿಕೊಡಬೇಕು. ಸಾಮಾಜಿಕ, ಆರ್ಥಿಕ, ಧಾರ್ಮಿಕ, ರಾಜಕೀಯ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಮುನ್ನುಗ್ಗಲು ಪ್ರೇರಣ ನೀಡಬೇಕು. ಅಲ್ಪಸಂಖ್ಯಾತ ಮಹಿಳೆಯರು ಸೇರಿದಂತೆ ಎಲ್ಲಾ ಮಹಿಳೆಯರು ರಾಷ್ಟ್ರದ ಅಭಿವೃದ್ಧಿಗೆ ತಮ್ಮದೆ ಆದ ಕೊಡುಗೆಯನ್ನು ನೀಡುತ್ತಿದ್ದಾರೆ. ಮಹಿಳೆಯರು ಯಾವುದೇ ಕಾರಣಕ್ಕೂ ಧೃತಿಗೆಡದೆ, ಧೈರ್ಯದಿಂದ ಸಾಧನೆ ಮಾಡಬೇಕು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಉಪನ್ಯಾಸಕ, ಬಳಗದ ಅಧ್ಯಕ್ಷ ಎಚ್.ಬಿ.ಪಾಟೀಲ, ಅಲ್ಪಸಂಖ್ಯಾತರು ಹೊಂದಿರುವ ಮಾತೃಭಾಷೆ, ಲಿಪಿ, ಸಂಸ್ಕೃತಿ, ಪರಂಪರೆಯನ್ನು ಗೌರವಿಸುವುದು, ಉಳಿಸಿ-ಬೆಳೆಸುವುದು, ಶಿಕ್ಷಣ ಸೇರಿದಂತೆ ಎಲ್ಲಾ ಕೇತ್ರಗಳಲ್ಲಿ ಅವರು ಸಕ್ರಿಯವಾಗಿ ಭಾಗವಹಿಸಲು ಪೂರಕವಾದ ವಾತಾವರಣ ನಿರ್ಮಿಸಿಕೊಡುವ ಮೂಲಕ ಬಹುಸಂಸ್ಕೃತಿಯನ್ನು ಗೌರವಿಸಬೇಕಾದದ್ದು ಪ್ರತಿಯೊಬ್ಬರ ಜವಬ್ದಾರಿಯಾಗಿದೆ. ಅಲ್ಪಸಂಖ್ಯಾತ ಮಹಿಳೆಯರಿಗೆ ಶಿಕ್ಷಣ, ಉದ್ಯೋಗ, ಮೂಲಭೂತ ಸೌಕರ್ಯಗಳು, ಆರ್ಥಿಕ ಸಹಾಯ, ಸೂಕ್ತವಾದ ಮಾರ್ಗದರ್ಶನ ಮತ್ತು ಪ್ರೋತ್ಸಾಹವನ್ನು ನೀಡಿ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶದ ಜಾಗೃತಿಯನ್ನು ಮೂಡಿಸಬೇಕು ಎಂಬುದು ದಿನದ ಹಿನ್ನಲೆಯಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಮಾಜ ಸೇವಕಿ ಶೋಫಿಯಾ ಬೇಗಂ ಎಂ.ಪಟೇಲ್, ಯುವ ಸಾಧಕಿಯರಾದ ಫರ್ದುಸ್ ಆರ್.ಪಟೇಲ್, ಪೃಥ್ವಿ ಕೋರವಾರ, ಸಂಸ್ಥೆಯ ಅಧ್ಯಕ್ಷ ಸತೀಸ್ ಟಿ.ಸಣಮನಿ, ದೇವೇಂದ್ರಪ್ಪ ಗಣಮುಖಿ, ಇಸ್ಮೈಲ್ ಅತ್ತರ್, ದತ್ತು ಹಡಪದ ಸೇರಿದಂತೆ ಸಂಸ್ಥೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.