-
ಬಿಜೆಪಿ ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಟೀಕೆ
ಬೆಂಗಳೂರು: ವಿಧಾನಮಂಡಲ ಅಧಿವೇಶನ ಮುಂದೂಡಿಕೆಯಾದ ಕೂಡಲೇ ವಿದ್ಯುತ್ ದರ ಏರಿಕೆ ಆಗಿದೆ! ಏನೀ ಹುನ್ನಾರ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ನವರಾತ್ರಿಗೆ ಹಬ್ಬದ ಶುಭಾಶಯ ಹೇಳಬೇಕಿದ್ದ ಸರ್ಕಾರ, ಕರೆಂಟ್ ಶಾಕ್ ಕೊಟ್ಟು ಜನರು ಕಂಗೆಡುವಂತೆ ಮಾಡಿದೆ. ಪ್ರತಿ ಯೂನಿಟ್ʼಗೆ 24ರಿಂದ 43 ಪೈಸೆ ಹೆಚ್ಚಿಸಿರುವುದು ಅವೈಜ್ಞಾನಿಕ, ಅನಪೇಕ್ಷಿತ & ಖಂಡನೀಯ ಎಂದಿದ್ದಾರೆ.
ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯ ಬಿಜೆಪಿ ಸರ್ಕಾರ ವಿದ್ಯುತ್ ದರ ಏರಿಸಿದೆ. ಕಳೆದ ಜುಲೈನಲ್ಲಿ ಬರೆ ಎಳೆದಿತ್ತು. ಈಗ ಮತ್ತೆ ದರ ಹೆಚ್ಚಿಸಿದೆ. ಕಲ್ಲಿದ್ದಲು ಬೆಲೆ ಹೆಚ್ಚಳದಿಂದ ವಿದ್ಯುತ್ ದರವನ್ನೂ ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ ರೀತಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು ತುಂಬಿವೆ. ವಿದ್ಯುತ್ ಉತ್ಪಾದನೆ ಉತ್ತಮವಾಗಿದೆ. ಆದರೂ ಖರೀದಿ ವೆಚ್ಚದಲ್ಲಿ 1,244 ಕೋಟಿ ರೂ. ಹೆಚ್ಚಳ ಆಗಿದೆ ಎನ್ನುವ ಲೆಕ್ಕವನ್ನು ನಂಬುವ ರೀತಿಯಲ್ಲಿ ಇಲ್ಲ. ಇಂಧನ ವಲಯದ ಕೆಲ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ಎಸ್ಕಾಂಗಳ ಭುಜದ ಮೇಲೆ ಗುಂಡಿಟ್ಟು, ಜನರಿಗೆ ಹೊಡೆಯುವ ಕೆಲಸ ಆಗುತ್ತಿದೆ ಎಂದು ಕಿಡಿಕಾರಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರ ಜನರ ಪರ ಇಲ್ಲ ಎನ್ನುವುದು ಸತ್ಯ. ಜಾಗತಿಕ ಪೇಟೆಯಲ್ಲಿ ಕಚ್ಛಾತೈಲದ ಬೆಲೆ ನಿರಂತರ ಇಳಿದರೂ ದೇಶದಲ್ಲಿ ತೈಲಬೆಲೆ ಇಳಿಸದ ಕೇಂದ್ರದ ಸರ್ಕಾರದ ಹಾದಿಯಲ್ಲೇ ರಾಜ್ಯ ಸರಕಾರವೂ ಸಾಗಿದೆ. ವಿದ್ಯುತ್ ದರದ ನಿರಂತರ ಏರಿಕೆ ಬಗ್ಗೆ ಗಂಭೀರ ಅನುಮಾನಗಳಿವೆ ಎಂದು ಅವರು ದೂರಿದ್ದಾರೆ.
ವಿದ್ಯುತ್ ಸೋರಿಕೆ, ಕಳವು ತಡೆಲಾಗದ, ನವೀನ ತಂತ್ರಜ್ಞಾನ ಅಳವಡಿಸಿಕೊಳ್ಳದ ಬಿಜೆಪಿ ಸರ್ಕಾರ ಅದಕ್ಷತೆಯ ಆಡಂಬೋಲ. ʼಬಡವರನ್ನು ಸುಲಿದು ಬಿಸ್ನೆಸ್ ಕ್ಲಾಸಿನ ಜನರ ಜೇಬು ತುಂಬುʼ ಎನ್ನುವುದು ಬಿಜೆಪಿ ತತ್ತ್ವ. ಅದನ್ನೇ ಕರ್ನಾಟಕದಲ್ಲೂ ಎಗ್ಗಿಲ್ಲದೆ ಮಾಡುತ್ತಿದೆ ಎಂದು ಹೆಚ್ ಡಿಕೆ ಟೀಕಿಸಿದ್ದಾರೆ.