ಕಲಬುರಗಿ: ಗುಲಬರ್ಗಾ (ಮೀಸಲು) ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಇದೇ ಏಪ್ರಿಲ್ 23ರಂದು ಮತದಾನ ನಡೆಯಲಿದೆ. ಈ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಅನುಕೂಲವಾಗುವಂತೆ ಇದೇ ಏಪ್ರಿಲ್ 23ರ ಬೆಳಗಿನ ೬ ರಿಂದ ಸಂಜೆ 6 ಗಂಟೆಯವರೆಗೆ ಅಥವಾ ಮತಗಟ್ಟೆಯಲ್ಲಿ ಮತದಾನವು ಮುಕ್ತಾಯಗೊಂಡು ಮತಗಟ್ಟೆ ಸಿಬ್ಬಂದಿಗಳು ಮತಗಟ್ಟೆಯಿಂದ ತೆರಳುವವರೆಗೆ ಕಲಬುರಗಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲ ಮತಗಟ್ಟೆಗಳ ಸುತ್ತಮುತ್ತಲೂ 200 ಮೀಟರ್ ವ್ಯಾಪ್ತಿ ಪ್ರದೇಶವನ್ನು ಸಿ.ಆರ್.ಪಿ.ಸಿ. ಸೆಕ್ಷನ್ 144, 144ಎ ರನ್ವಯ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಕಲಬುರಗಿ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅವರು ಆದೇಶ ಹೊರಡಿಸಿದ್ದಾರೆ.
ಮೆರವಣಿಗೆ ಅಥವಾ 5 ಜನರಿಂಗಿತ ಹೆಚ್ಚು ಜನ ಸೇರುವುದು, ಯಾವುದೇ ರೀತಿಯ ಮಾರಕಾಸ್ತ್ರ, ಶಸ್ತ್ರಾಸ್ತ್ರ, ಸ್ಫೋಟಕ ವಸ್ತುಗಳನ್ನು ಒಯ್ಯುವುದನ್ನು, ಪ್ರತಿಕೃತಿ ಪ್ರದರ್ಶನ, ದಹನ ಮಾಡುವುದನ್ನು ಮತ್ತು ಬಹಿರಂಗ ಘೋಷಣೆ ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು, ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು ಹಾಗೂ ಸಾರ್ವಜನಿಕರ ಗಾಂಭಿರ್ಯ ಮತ್ತು ನೈತಿಕತೆಗೆ ಭಂಗ ತರುವಂತಹ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.
ಈ ಆದೇಶವು ಚುನಾವಣಾ ಕರ್ತವ್ಯನಿರತ ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳಿಗೆ, ಪೊಲೀಸ್ ಅಧಿಕಾರಿಗಳಿಗೆ, ನೇಮಕಗೊಂಡಿರುವ ಚುನಾವಣಾ ಏಜೆಂಟ್ಸ್‌ಗಳಿಗೆ ಹಾಗೂ ಒಬ್ಬೊಬ್ಬರಾಗಿ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವ ಮತದಾರರಿಗೆ ಅನ್ವಯಿಸುವುದಿಲ್ಲ. ಈ ಆದೇಶವು ಅಂತ್ಯಕ್ರಿಯೇ ಮೆರವಣಿಗೆ ಮತ್ತು ಇನ್ನಿತರ ಪ್ರಾಧಿಕಾರದಿಂದ ಅನುಮತಿ ಪಡೆದ ಪ್ರಕರಣಗಳಿಗೆ ಅನ್ವಯಿಸುವುದಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ಮತ್ತು ಆದೇಶ ಉಲ್ಲಂಘಿಸಿದವರ ವಿರುದ್ಧ ಕಾನೂನಿನನ್ವಯ ಕ್ರಮ ಕೈಗೊಳ್ಳಬೇಕೆಂದು ಅವರು ತಿಳಿಸಿದ್ದಾರೆ.