ಕಲಬುರಗಿ; ಜಿಲ್ಲೆಯ ಒಟ್ಟು 168 ಪರೀಕ್ಷಾ ಕೇಂದ್ರಗಳಲ್ಲಿ ಇದೇ ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಗಳು ನಡೆಯಲಿವೆ.
ಪರೀಕ್ಷೆಯನ್ನು ಶಾಂತಿಯುತ ಹಾಗೂ ಸುಸೂತ್ರವಾಗಿ ನಡೆಸಲು ಅನುಕೂಲವಾಗುವಂತೆ ಕಲಬುರಗಿ ಜಿಲ್ಲೆಯಲ್ಲಿನ ಎಲ್ಲಾ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದ್ದು, 1973ರ ಸಿಆರ್.ಪಿ.ಸಿ. ಕಲಂ 144ರ ಅನ್ವಯ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರು ಗುರುವಾರ ಈ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಪೊಲೀಸ್ ಅಧಿನಿಯಮ 1963ರ ಕಲಂ-35(ಸಿ)ರ ಅನ್ವಯ ಪರೀಕ್ಷಾ ಸಮಯದಲ್ಲಿ ಸಂಬಂಧಪಟ್ಟ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಹಾಗೂ ಸಿಬ್ಬಂದಿಗಳನ್ನು ಹೊರತುಪಡಿಸಿ ಪರೀಕ್ಷಾ ಕೇಂದ್ರದ ವಿದ್ಯಾರ್ಥಿಗಳು ಹಾಗೂ ಯಾವುದೇ ಬೇರೆ ವ್ಯಕ್ತಿಗಳು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ಮೊಬೈಲ್ ಫೋನ್, ಪೇಜರ್, ಬ್ಲ್ಯೂಟೂತ್ ಹಾಗೂ ವೈರಲೆಸ್ ಸೆಟ್‍ಗಳು ಹಾಗೂ ಮತ್ತಿತರ ಎಲೆಕ್ಟ್ರಾನಿಕ್ಸ್ ಉಪಯೋಗಿಸುವುದನ್ನು ನಿಷೇಧಿಸಲಾಗಿದೆ. ಇದಲ್ಲದೇ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯ 200 ಮೀಟರ್ ಪ್ರದೇಶದಲ್ಲಿನ ಎಲ್ಲಾ ಜಿರಾಕ್ಸ್ ಮತ್ತು ಪುಸ್ತಕ ಅಂಗಡಿ ಮುಂತಾದವನ್ನು ಮುಚ್ಚುವಂತೆಯೂ ಜಿಲ್ಲಾ ದಂಡಾಧಿಕಾರಿಗಳು ಆದೇಶಿಸಿದ್ದಾರೆ.