ವಾರ್ತಾ ಇಲಾಖೆ ʼಸದೃಢʼಕ್ಕೆ ಪ್ರಾಮಾಣಿಕ ಪ್ರಯತ್ನ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

0
48

ಬೆಂಗಳೂರು; ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯನ್ನು ಈಗಿನ ಕಾಲಮಾನಕ್ಕೆ ತಕ್ಕಂತೆ ಅತ್ಯಂತ ಕ್ರಿಯಾಶೀಲವಾಗಿ ರೂಪಿಸುವಲ್ಲಿ ಮತ್ತು ಎಲ್ಲ ರೀತಿಯಿಂದಲೂ ಸದೃಢಗೊಳಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಹೇಳಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ವೇದಿಕೆ ವತಿಯಿಂದ ಇಲಾಖೆಯ ಮಹಾತ್ಮಗಾಂಧಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

Contact Your\'s Advertisement; 9902492681

ಪ್ರಸಕ್ತ ಸನ್ನಿವೇಶನದಲ್ಲಿ ಸಾಮಾಜಿಕ ಜಾಲತಾಣವು ಸರ್ವವ್ಯಾಪಿಯಾಗಿದೆ. ತಂತ್ರಜ್ಞಾನದ ಜತೆಜತೆಯಾಗಿ ಹೆಜ್ಜೆ ಹಾಕಲು ಅನುಕೂಲವಾಗುವಂತೆ ಇಲಾಖೆಯನ್ನು ಸದೃಡಗೊಳಿಸಬೇಕಿದ್ದು, ಈ ದಿಸೆಯಲ್ಲಿ ಕಾರ್ಯ ಆರಂಭಿಸಲಾಗುವುದು ಎಂದು ಹೇಳಿದ ಅವರು ವಾರ್ತಾ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿ, ನನೆಗುದಿಗೆ ಬಿದ್ದಿರುವ ವಿವಿಧ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಬಡ್ತಿ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಈಡೇರಿಸಲು ಕ್ರಮವಹಿಸಲಾಗುವುದು ಎಂದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಸರಕಾರದ ಎರಡು ಕಣ್ಣುಗಳಿದ್ದಂತೆ; ಸರಕಾರದ ನೀತಿ ನಿರ್ಧಾರಗಳು ಮತ್ತು ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತದೆ; ಈಗಿನ ತಂತ್ರಜ್ಞಾನ ಅಳವಡಿಸಿಕೊಂಡು ಕಾರ್ಯನಿರ್ವಹಿಸಬೇಕಿದೆ ಎಂದರು.

ಸಂಕಷ್ಟದಲ್ಲಿರುವ ಪತ್ರಕರ್ತರ ಪಿಂಚಣಿ ಕುರಿತಂತೆ ಹೆಚ್ಚಿನ ಅರ್ಜಿಗಳು ಬರುತ್ತಿದ್ದು, ಅವುಗಳನ್ನು ನಿಯಮಾನುಸಾರ ವಿಲೇವಾರಿ ಮಾಡುವ ಅಗತ್ಯ ಇದೆ; ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿ ಅಡಿಯಿರುವ ವಿವಿಧ ಸೌಲಭ್ಯಗಳನ್ನು ಪತ್ರಕರ್ತರಿಗೆ ಕಲ್ಪಿಸುವ ಕೆಲಸ ಆಗಬೇಕು ಎಂದರು.

ಪತ್ರಕರ್ತರು ಮತ್ತು ವಾರ್ತಾ ಇಲಾಖೆಯ ಸಂಬಂಧ ಹೇಗಿರುತ್ತದೆ ಎಂಬ ಕೂತೂಹಲದೊಂದಿಗೆ 25 ರ್ಷಗಳ ಹಿಂದೆ ಪತ್ರಿಕೆಯ ವರದಿಗಾರನಾಗಿ ಈ ಕಚೇರಿಗೆ ಭೇಟಿ ನೀಡಿರುವುದನ್ನು ನೆನಪಿಸಿಕೊಂಡ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆವಿಪಿ ಅವರು ಇಂದು ಇದೇ ಇಲಾಖೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡುತ್ತಿರುವುದು ಅತ್ಯಂತ ಸಂತಸ ತಂದಿದೆ ಎಂದರು.

ಕಾರ್ಯದರ್ಶಿಗಳು ಮತ್ತು ಆಯುಕ್ತರು ಅತ್ಯಂತ ಕ್ರಿಯಾಶೀಲರಾಗಿದ್ದು, ಇಲಾಖೆಯನ್ನು ಅತ್ಯಂತ ಸರಿಯಾದ ದಿಕ್ಕಿನಲ್ಲಿ ಕೊಂಡಯ್ಯಲಿದ್ದಾರೆ ಎಂದು ಅವರು ಹೇಳಿದರು.

ಮುಖ್ಯಮಂತ್ರಿಗಳ ಕಾರ್ಯದರ್ಶಿಗಳು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿಗಳಾದ ಎನ್.ಜಯರಾಂ ಅವರು ಮಾತನಾಡಿ, ಸರಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಇಲಾಖೆ ಹಾಗೂ ಇಲಾಖೆಯ ಅಧಿಕಾರಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ; ಇದರ ಜೊತೆಗೆ ಲೋಪದೋಷಗಳು, ಸಮಸ್ಯೆಗಳನ್ನು ಸರಕಾರದ ಗಮನಕ್ಕೆ ತರುವಲ್ಲಿಯೂ ಈ ಇಲಾಖೆ ಅಧಿಕಾರಿಗಳ ಪಾತ್ರ ಅಪಾರವಾಗಿದ್ದು, ಅತ್ಯಂತ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.

ಈ ಇಲಾಖೆ ಚುರುಕಾಗಿ ಕೆಲಸ ಮಾಡಿದರೆ ಸರಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ; ಈ ಹಿಂದೆಂದಿಗಿಂತಲೂ ಹೆಚ್ಚು ಅವಶ್ಯಕತೆ ಈಗ ಇದೆ ಎಂದರು.

ಕೊಟ್ಟಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಬೇಕು; ಈ ಮೂಲಕ ಸರಕಾರಕ್ಕೆ ಒಳ್ಳೆಯ ಹೆಸರು ತರಬೇಕು ಎಂದು ಹೇಳಿದ ಕಾರ್ಯದರ್ಶಿ ಜಯರಾಂ ಅವರು ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಮತ್ತು ಇಲಾಖೆಗೆ ಇತಿಮಿತಿಗಳ ನಡುವೆಯೂ ಸಮರ್ಪಕ ಅನುದಾನವನ್ನು ಮುಖ್ಯಮಂತ್ರಿಗಳು ಒದಗಿಸಿಕೊಡಲಿದ್ದಾರೆ ಎಂದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ ನಿಂಬಾಳ್ಕರ್ ಅವರು ಮಾತನಾಡಿ, ಸರಕಾರದ ಅಪೇಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಸರಕಾರದ ಜನಪರ ಕಾರ್ಯಕ್ರಮಗಳ ಪ್ರಚಾರ ಮನಗಂಡು ಇಲಾಖೆ ಸ್ಥಾಪಿಸಲಾಗಿದೆ. ಸದ್ಯದ ತಂತ್ರಜ್ಞಾನಕ್ಕೆ ತಕ್ಕಂತೆ ಇಲಾಖೆಯ ಕಾರ್ಯವ್ಯಾಪ್ತಿ ಬದಲಾಗಿದ್ದು, ಅದನ್ನು ಮೈಗೂಡಿಸಿಕೊಂಡು ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯನಿರ್ವಹಿಸಬೇಕಿದೆ ಎಂದರು.

ಸಮಾಜದ ಪ್ರತಿಯೊಂದು ರಂಗದಲ್ಲಿ ಮಾತ್ರವಲ್ಲದೇ ಖಾಸಗಿ ಬದುಕಿನಲ್ಲಿಯೂ ಮಾಧ್ಯಮ ಪ್ರವೇಶಿಸಿದೆ. ಇಂತಹ ಸಂದರ್ಭದಲ್ಲಿ ನಾವು ನಮ್ಮ ಹೊಣೆಗಾರಿಕೆ ಅರಿತುಕೊಂಡು ಕೆಲಸ ಮಾಡಬೇಕು ಮತ್ತು ಹೊಸ-ಹೊಸ ವಿಚಾರಗಳನ್ನು ಮತ್ತು ಚಿಂತನೆಗಳನ್ನು ಇಲಾಖೆಯ ದೈನಂದಿನ ಕೆಲಸಗಳಲ್ಲಿ ಅಳವಡಿಸಿಕೊಂಡು ಇಲಾಖೆಯ ಕೆಲಸದಲ್ಲಿ ನಾವಿನ್ಯತೆ ತರಬೇಕಿದೆ ಎಂದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ವೇದಿಕೆ ವತಿಯಿಂದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಮುಖ್ಯಮಂತ್ರಿಗಳ ಕಾರ್ಯದರ್ಶಿಗಳು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿಗಳಾದ ಎನ್.ಜಯರಾಂ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ ನಿಂಬಾಳ್ಕರ್ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಜಂಟಿ ನಿರ್ದೇಶಕರಾದ ಮಂಜುನಾಥ ಡೊಳ್ಳಿನ್ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಈ ಸಂದರ್ಭದಲ್ಲಿ ಇಲಾಖೆಯ ಜಂಟಿ ನಿರ್ದೇಶಕರುಗಳಾದ ಪಲ್ಲವಿ ಹೊನ್ನಾಪುರ, ಸಿದ್ದೇಶ್ವರಪ್ಪ ಜಿ.ಬಿ., ಸಿ.ಆರ್.ನವೀನ್, ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ ಕಾರ್ಯದರ್ಶಿಗಳಾದ ಶಂಕರಪ್ಪ, ಅಧಿಕಾರಿಗಳಾದ ಹಿಮಂತರಾಜು, ಆರ್.ರಾಜು ಸೇರಿದಂತೆ ಇಲಾಖೆಯ ಉಪನಿರ್ದೇಶಕರುಗಳು, ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

ಕಾರ್ಯಕ್ರಮದ ನಂತರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಆಯುಕ್ತರ ಅಧ್ಯಕ್ಷತೆಯಲ್ಲಿ ಜರುಗಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here