ಬಳ್ಳಾರಿ: ಹರಪನಹಳ್ಳಿ ತಾಲೂಕು ಕಣಿವೆಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆ ಮಾಡಿ ಹಲವರು ಅಸ್ವಸ್ಥರಾದ ಹಿನ್ನೆಲೆಯಲ್ಲಿ ಗ್ರಾಮದ ಜನರಿಗೆ ತಕ್ಷಣ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡುವಂತೆ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್ ಮತ್ತು ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಗ್ರಾಮದ ಕೊಳವೆ ಬಾವಿಯೊಂದರ ನೀರು ಕಲುಷಿತಗೊಂಡಿರುವುದರಿಂದಾಗಿ ಆ ಬಾವಿನ ನೀರು ಸೇವಿಸಿದವರಲ್ಲಿ ಸುಮಾರು 20 ಜನ ಅಸ್ವಸ್ಥರಾಗಿದ್ದು ಅವರಲ್ಲಿ 8 ಜನರನ್ನು ಹರಪನಹಳ್ಳಿ ಸರ್ಕಾರಿ ಆಸ್ಪತ್ರೆ ಸೇರಿದಂತೆ ವಿವಿಧ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದ್ದು, ಒಬ್ಬರನ್ನು ದಾವಣೆಗೆರೆಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಜೊತೆಗೆ, ಗ್ರಾಮದಲ್ಲಿ ತಾತ್ಕಾಲಿಕ ಆರೋಗ್ಯ ಕೇಂದ್ರ ಸ್ಥಾಪಿಸಲಾಗಿದ್ದು ತುರ್ತು ಚಿಕಿತ್ಸೆಗೆ ಅನಕೂಲ ಮಾಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ಕಲುಷಿತಗೊಂಡ ನೀರನ್ನು ಸಂಗ್ರಹಿಸಿ ಪರೀಕ್ಷೆಗೆ ಕಳಿಸಲಾಗಿದೆ ಎಂದು ಹೇಳಿರುವ ಸಚಿವರು ಶುದ್ದ ಕುಡಿಯುವ ನೀರು ಸರಬರಾಜು ಮಾಡಲು ಅಗತ್ಯ ಹಾಗೂ ಸೂಕ್ತ ಕ್ರಮಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಪತ್ರಿಕೆಗಳ ವರದಿಗಳನ್ನು ಆಧರಿಸಿ ತಕ್ಷಣ ಕಾರ್ಯಪ್ರವೃತ್ತರಾದ ಸಚಿವರು ಅಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದು ಆಸ್ಪತ್ರೆಯಲ್ಲಿ ದಾಖಲಾಗಿರುವವರ ಬಗ್ಗೆ ನಿಗಾ ಇಡುವಂತೆ ಅಧಿಕಾರಿಗಳಿಗೆ ಹಾಗೂ ವೈದ್ಯರಿಗೆ ಸೂಚನೆ ನೀಡಿದ್ದಾರೆ.