ಸಾರ್ವಜನಿಕರು ಲಾಭ ಪಡೆಯುವಂತೆ ಡಿ.ಸಿ. ಮನವಿ
ಕಲಬುರಗಿ: ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ
ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯಲ್ಲಿ ಇದೇ ಸೆ.25 ರಂದು ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 5.30 ಗಂಟೆ ವರೆಗೆ ಚಿಂಚೋಳಿ ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸುವ “ಜನತಾ ದರ್ಶನ” ಕಾರ್ಯಕ್ರಮ ಅಯೋಜಿಸಿದ್ದು, ಸಾರ್ವಜನಿಕರು ಇದರ ಲಾಭ ಪಡೆಯಬೇಕೆಂದು ಡಿ.ಸಿ. ಬಿ.ಫೌಜಿಯಾ ತರನ್ನುಮ್ ಮನವಿ ಮಾಡಿದ್ದಾರೆ.
ಸಾರ್ವಜನಿಕರು ತಮ್ಮ ಸಣ್ಣ-ಪುಟ್ಟ ಸಮಸ್ಯೆ, ಕುಂದುಕೊರತೆಗಳಿಗೆ ಬೆಂಗಳೂರಿಗೆ ಹೋಗಿ ಸಚಿವರು, ಮುಖ್ಯಮಂತ್ರಿಗಳನ್ನು ಕಾಣುವುದನ್ನು ತಪ್ಪಿಸಲು ಜಿಲ್ಲಾ ಮಟ್ಟದಲ್ಲಿಯೇ ಸಮಸ್ಯೆ ಆಲಿಸಿ ಸೂಕ್ತ ಪರಿಹಾರ ಒದಗಿಸುವ ಉದ್ದೇಶದಿಂದ ಈ ಜನತಾ ದರ್ಶನ ಆಯೋಜಿಸಿದೆ. ಸ್ಥಳೀಯ ಜನಪ್ರತಿನಿಧಿಗಳು ಸಹ ಇದರಲ್ಲಿ ಭಾಗವಹಿಸಿಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿ.ಇ.ಓ, ಜಿಲ್ಲಾ ಪೊಲೀಸ್ ಅಧೀಕ್ಷರು ಒಳಗೊಂಡಂತೆ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು ಜನತಾ ದರ್ಶನದಲ್ಲಿ ಹಾಜರಿರಲಿದ್ದಾರೆ. ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಯಿಂದ ಮಳಿಗೆ ಹಾಕಿ ಸಾರ್ವಜನಿಕರಿಗೆ ಸರ್ಕಾರಿ ಯೋಜನೆಗಳ ಮಾಹಿತಿ ನೀಡಲಾಗುತ್ತಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಕುಂದುಕೊರತೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಪಡೆಯಬಹುದಾಗಿದೆ ಎಂದು ಡಿ.ಸಿ. ಬಿ.ಫೌಜಿಯಾ ತರನ್ನುಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.