ಈಶಾನ್ಯ ಪದವೀಧರ ಕ್ಷೇತ್ರ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿಗೆ ನ. 11 ಕೊನೆ

0
611

ಕಲಬುರಗಿ; ಈಶಾನ್ಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿ ಸಿದ್ದಪಡಿಸಲಾಗುತ್ತಿದ್ದು, ಅರ್ಹತಾ ದಿನಾಂಕ 01.11.2023 ಆಧರಿಸಿ ಹೊಸದಾಗಿ ಮತದಾರರ ಪಟ್ಟಿ ಸಿದ್ದಪಡಿಸಲು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಕ್ಷೇತ್ರದ ಮತದಾರರ ನೋಂದಣಾಧಿಕಾರಿಗಳಾಗಿರುವ ಕೃಷ್ಣ ಬಾಜಪೇಯಿ ಅವರು ವೇಳಾಪಟ್ಟಿ ಪ್ರಕಟಿಸಿದ್ದಾರೆ.

ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ-18ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕ 2023ರ ನವೆಂಬರ್ 6 ಆಗಿರುತ್ತದೆ. ನವೆಂಬರ್ 23 ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಿ ಅಲ್ಲಿಂದ ಡಿಸೆಂಬರ್ 9ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. 2023ರ ಡಿಸೆಂಬರ್ 30 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Contact Your\'s Advertisement; 9902492681

ಕ್ಷೇತ್ರದ ಮತದಾರ ಪಟ್ಟಿ ಸಿದ್ಧಪಡಿಸುವ ಕಾರ್ಯಕ್ಕೆ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಕ್ಷೇತ್ರದ ಮತದಾರರ ನೋಂದಣಾಧಿಕಾರಿಗಳಾಗಿದ್ದು, ವಿಭಾಗದ ವ್ಯಾಪ್ತಿಯಲ್ಲಿನ ಜಿಲ್ಲಾಧಿಕಾರಿಗಳು, ಕಲಬುರಗಿ ಮತು ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತರು, ವಿಭಾಗದ ಆಯಾ ಉಪ ವಿಭಾಗದ ಸಹಾಯಕ ಆಯುಕ್ತರು, ವಿಭಾಗದ ಎಲ್ಲಾ ತಾಲೂಕಿನ ತಹಸೀಲ್ದಾರರು ಸಹಾಯಕ ಮತದಾರರ ನೊಂದಣಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ಮತದಾರ ಪಟ್ಟಿ ಸೇರ್ಪಡೆಗೆ ಷರತ್ತುಗಳು: ಅರ್ಹತಾ ದಿ.01.11.2023ಕ್ಕಿಂತ 3 ವರ್ಷಗಳ ಪೂರ್ವದಲ್ಲಿ ಅಂದರೆ 01.11.2020 ಕ್ಕಿಂತಲು ಹಿಂದೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವೀಧರರಾಗಿರಬೇಕು. ದಿ.01.11.2020 ಕ್ಕಿಂತಲೂ ಮೊದಲು ಪದವಿ ಪಡೆದಿರುವಂತಹ ಪದವೀಧರರು ನಿಗದಿಪಡಿಸಿದ ನಮೂನೆ-18 ರಲ್ಲಿ (ಭಾವಚಿತ್ರದೊಂದಿಗೆ) ಭರ್ತಿ ಮಾಡಿದ ಅರ್ಜಿಯೊಂದಿಗೆ ಕಡ್ಡಾಯವಾಗಿ ತಾವು ಉತ್ತೀರ್ಣರಾಗಿರುವ ಅಂಕಪಟ್ಟಿ, ಆಧಾರ ಕಾರ್ಡ್, ಚುನಾವಣಾ ಗುರುತಿನ ಚೀಟಿ ಹಾಗೂ ತಾವು ವಾಸಿಸುತ್ತಿರುವ ವಾಸಸ್ಥಳದ ದಾಖಲೆಗಳನ್ನು ಸ್ವಯಂ ಧೃಡೀಕರಿಸಿದಲ್ಲದೇ ಪತ್ರಾಂಕಿತ ಅಧಿಕಾರಿಯಿಂದ ದೃಢೀಕರಿಸಿ 2023ರ ನವೆಂಬರ್ 6 ರೊಳಗಾಗಿ ಮತದಾರರ ನೊಂದಣಾಧಿಕಾರಿಗಳು/ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಖುದ್ದಾಗಿ ಬಂದು ಸಲ್ಲಿಸಬೇಕು.

ಸರ್ಕಾರಿ ಕಚೇರಿಗಳ ಇಲಾಖಾ ಮುಖ್ಯಸ್ಥರು ತಮ್ಮ ಅಧೀನದಲ್ಲಿ ಬರುವ ಸರ್ಕಾರಿ ನೌಕರರ ಸೇವಾ ದಾಖಲೆಗಳನ್ನು ಪರಿಶೀಲಿಸಿ, ಆಯೋಗವು ನಿಗದಿಪಡಿಸಿರುವ 3ನೇ ಅನುಸೂಚಿತ ನಮೂನೆಯಲ್ಲಿ ದೃಢೀಕರಣ ಪತ್ರವನ್ನು ನೀಡಿ ತಮ್ಮ ಕಚೇರಿಯ ಎಲ್ಲಾ ಅರ್ಹ ಸಿಬ್ಬಂದಿಗಳ ಅರ್ಜಿಗಳನ್ನು ಒಟ್ಟಾಗಿ 2023ರ ನವೆಂಬರ್ 6 ರೊಳಗಾಗಿ ಸಲ್ಲಿಸಬೇಕು. ಇದೇ ರೀತಿಯಲ್ಲಿ ವಕೀಲರು, ವೈದ್ಯರು, ಚಾರ್ಟರ್ಡ್ ಅಕೌಂಟೆಂಟರು ಹಾಗೂ ನೊಂದಾಯಿತ ಇಂಜಿನಿಯರ್ ಸಂಘದ ಸದಸ್ಯರು ದೃಢೀಕರಿಸಿದ ಪಟ್ಟಿಯೊಡನೆ ಅರ್ಜಿಯನ್ನು ಒಟ್ಟಾಗಿ ಸಲ್ಲಿಸಬಹುದಾಗಿದೆ. ಫಾರಂ-18 ನಮೂನೆ ಈಗಾಗಲೇ ಎಲ್ಲಾ ಗೊತ್ತುಪಡಿಸಿದ ಕಚೇರಿಯಲ್ಲಿ ಲಭ್ಯವಿದ್ದು, ಉಚಿತವಾಗಿ ಪಡೆಯಬಹುದಾಗಿದೆ.

ಅರ್ಹ ಪದವೀಧರರು ಮೂಲ ಪದವಿ ಪ್ರಮಾಣಪತ್ರ ಮತ್ತು ಅದರ ಪ್ರತಿಯನ್ನು ಸ್ವಯಂ ಧೃಡೀಕರಿಸಿಕೊಂಡು, ಗೊತ್ತುಪಡಿಸಿದ ಅಧಿಕಾರಿಯ ಮುಂದೆ ಖುದ್ದು ಹಾಜರಾಗಿ ಅವರಿಂದ ದೃಢೀಕರಿಸಿಕೊಂಡು ಅವರಲ್ಲಿಯೇ ಅರ್ಜಿಯನ್ನು ಕಡ್ಡಾಯವಾಗಿ ನೀಡಬೇಕು. ಯಾವುದೇ ವ್ಯಕ್ತಿ ಅಂಚೆ ಮೂಲಕ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು, ಗೊತ್ತುಪಡಿಸಿದ ಅಧಿಕಾರಿಗೆ ಸಲ್ಲಿಸಿದಲ್ಲಿ ಅಂತಹ ಅರ್ಜಿದಾರರಿಗೆ ಗೊತ್ತುಪಡಿಸಿದ ಅಧಿಕಾರಿಯು ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡುತ್ತಾರೆ. ವಿಚಾರಣೆಗೆ ಹಾಜರಾಗದೇ ಅಥವಾ ದಾಖಲೆಗಳನ್ನು ಹಾಜರುಪಡಿಸದಿದ್ದಲ್ಲಿ ಅರ್ಜಿಗಳು ತಿರಸ್ಕೃತಗೊಳ್ಳುತ್ತವೆ. ಬಲ್ಕ (ಗುಚ್ಚಗಳಲ್ಲಿ) ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಅರ್ಹ ಪದವೀಧರರು ಹೆಚ್ಚಿನ ಆಸಕ್ತಿ ವಹಿಸಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಂಡು, ಸುಭದ್ರ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಬೇಕೆಂದು ಮತದಾರರ ನೋಂದಣಾಧಿಕಾರಿಗಳು ಮತದಾರರಲ್ಲಿ ಮನವಿ ಮಾಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here