ಕಲಬುರಗಿ: ರಾಯಚೂರು ಜಿಲ್ಲಾಧಿಕಾರಿಗಳಾಗಿದ್ದ ಬಿ. ಶರತ್ ಅವರನ್ನು ಕಲಬುರ್ಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರದ ವೈಯಕ್ತಿಕ ಮತ್ತು ಆಡಳಿತಾತ್ಮಕ ಸುಧಾರಣೆಯ (ಸೇವೆ-೧)ರ ಅಧೀನ ಕಾರ್ಯದರ್ಶಿ ಶಕುಂತಲಾ ಚೌಗಲಾ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.
ಕಲಬುರಗಿ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ್ ಅವರನ್ನು ವರ್ಗಾವಣೆಗೊಳಿಸಿ, ಅವರಿಂದ ತೆರವಾಗುವ ಸ್ಥಾನಕ್ಕೆ ತಕ್ಷಣವೇ ಜಾರಿಯಾಗುವಂತೆ ಬಿ. ಶರತ್ ಅವರನ್ನು ಕಲಬುರ್ಗಿ ಜಿಲ್ಲಾಧಿಕಾರಿಗಳನ್ನಾಗಿ ನಿಯೋಜಿಸಿ ಆದೇಶ ಹೊರಡಿಸಿದ್ದಾರೆ. ಬಿ. ಶರತ್ ಅವರು ರಾಯಚೂರು ಜಿಲ್ಲಾಧಿಕಾರಿಗಳಾಗಿ ಕಳೆದ ೨೦೧೮ರ ಆಗಸ್ಟ್‌ನಲ್ಲಿ ಅಧಿಕಾರ ಸ್ವೀಕರಿಸಿದ್ದರು. ಅದಕ್ಕಿಂತ ಮುಂಚೆ ಬಿ. ಶರತ್ ಅವರು ಮಂಡ್ಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾಗಿಯೂ ಸೇವೆ ಸಲ್ಲಿಸಿದ್ದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರವು ಅಸ್ತಿತ್ವಕ್ಕೆ ಬಂದ ಮೇಲೆ ಅಧಿಕಾರಿಗಳ ವರ್ಗಾವರ್ಗಿ ಹೆಚ್ಚುತ್ತಿದೆ. ಇತ್ತೀಚೆಗಷ್ಟೇ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಮಹಾನಗರ ಪಾಲಿಕೆಯ ಆಯುಕ್ತರ ವರ್ಗಾವಣೆ ಆಗಿತ್ತು. ಈಗ ಜಿಲ್ಲಾಧಿಕಾರಿಗಳ ವರ್ಗಾವಣೆಯೂ ಆಗಿದೆ.