ಕಲಬುರಗಿ: ಜಿಲ್ಲೆಯ ೩೫ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿವಿಧ ವಿಷಯಗಳ ಖಾಲಿಯಿರುವ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿವಶರಣಪ್ಪಾ ಮುಳೇಗಾಂವ ಅವರು ತಿಳಿಸಿದ್ದಾರೆ.
ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಸಂಬಂಧಪಟ್ಟ ಆಯಾ ಕಾಲೇಜುಗಳ ಪ್ರಾಚಾರ್ಯರಿಗೆ ೨೦೧೯ರ ಸೆಪ್ಟೆಂಬರ್ ೭ ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅತಿಥಿ ಉಪನ್ಯಾಸಕರ ನೇಮಕಾತಿಯು ಸರ್ಕಾರದ ಆದೇಶದ ಷರತ್ತುಗಳಿಗೊಳಪಟ್ಟಿರುತ್ತದೆ. ಖಾಲಿಯಿರುವ ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆಗಳ ವಿವರ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಿನಿ ವಿಧಾನಸೌಧದ ಆವರಣದಲ್ಲಿರುವ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-233830ಗೆ ಸಂಪರ್ಕಿಸಲು ಕೋರಲಾಗಿದೆ.
ಸರ್ಕಾರದ ದಿನಾಂಕ: 22-೦8-2019ರ ಆದೇಶದನ್ವಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರುಗಳು ನೇಮಕಗೊಂಡು ಕರ್ತವ್ಯಕ್ಕೆ ಹಾಜರಾಗುವವರೆಗೆ ಅಥವಾ ಫೆಬ್ರುವರಿ/ಮಾರ್ಚ್ ೨೦೨೦ರವರೆಗೆ ಇದರಲ್ಲಿ ಯಾವುದೂ ಮೊದಲೋ ಅಲ್ಲಿಯವರೆಗೆ ಅತಿಥಿ ಉಪನ್ಯಾಸಕರನ್ನು ಆಯಾ ಹುದ್ದೆಗೆ ನಿಗದಿಪಡಿಸಿದ ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸಿ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲು ಅನುಮತಿ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.