ಮಾಜಿ ಸಚಿವ ಡಿ.ಕೆ ಶಿವಕುಮಾರ ಬಂಧನಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಆಕ್ರೋಶ

0
92

ಕಲಬುರಗಿ: ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವ ಕ್ರಮವನ್ನು ಖಂಡಿಸಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಪಕ್ಷದ ಕಚೇರಿಯಿಂದ ಟೌನ್ ಹಾಲ್ ಮುಂದಿನ ರಸ್ತೆಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ರಸ್ತೆ ಮಧ್ಯೆ ಟೈರ್ ಸುಟ್ಟು, ರಸ್ತೆ ತಡೆ ಚಳುವಳಿಯ ಮೂಲಕ ಪ್ರತಿಭಟಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಜಗದೇವ್ ಗುತ್ತೇದಾರ್ ಕಾಳಗಿ ಅವರು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಸಿ.ಬಿಐ, ಇಡಿ., ಐಟಿ ಸಂಸ್ಥೆಗಳ ಮೂಲಕ ಅಧಿಕಾರ ದುರುಪಯೋಗ ಮಾಡಿಕೊಂಡು ದೇಶದ ಅಭಿವೃದ್ದಿ ಕಡೆಗೆ ಗಮನ ನೀಡದೇ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

Contact Your\'s Advertisement; 9902492681

ಈ ಹಿಂದೆ ಇದೇ ರಾಜಕೀಯ ದುರುದ್ದೇಶದಿಂದ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಮ್ ಅವರನ್ನು ಸಿಬಿಐ ಬಂಧಿಸಿದೆ. ಈಗ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಕಾಂಗ್ರೆಸ್ ನಾಯಕರೇ ಕೇಂದ್ರ ಬಿಜೆಪಿ ಸರ್ಕಾರದ ತನಿಖಾ ಸಂಸ್ಥೆಗಳು ಗುರಿಯಾಗಿಸುತ್ತಿವೆ ಎಂದು ಅವರು ಆರೋಪಿಸಿದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೇಶದ ಅಭಿವೃದ್ಧಿಗೆ ಗಮನ ಕೊಡುತ್ತಿಲ್ಲ. ದೇಶದ ಅನೇಕ ರಾಜ್ಯಗಳಲ್ಲಿ ಪ್ರವಾಹ ಉಂಟಾಗಿ ಜನರು ಸಂಕಷ್ಟದಲ್ಲಿದ್ದು, ಮೇಲಾಗಿ ಕರ್ನಾಟಕ ರಾಜ್ಯದಲ್ಲಿ ಲೆಕ್ಕವಿಲ್ಲದಷ್ಟು ಪ್ರವಾಹ ಬಂದು ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಜನರ ಕುಂದು ಕೊರತೆಗಳನ್ನು ಪರಿಶೀಲಿಸಿ ಪರಿಹಾರೋಪಾಯ ಕಂಡುಕೊಳ್ಳದೇ ದ್ವೇಷ ರಾಜಕಾರಣ ಮಾಡುವ ಮೂಲಕ ಕೀಳು ಮಟ್ಟದ ರಾಜಕೀಯವನ್ನು ಮಾಡುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಈ ಹಿಂದೆ ಕೇಂದ್ರದಲ್ಲಿ ಸ್ವಾತಂತ್ರ್ಯ ಬಂದಾಗಿನಿಂದ ಕಾಂಗ್ರೆಸ್ ಪಕ್ಷದ ಅನೇಕ ವರಿಷ್ಠ ನಾಯಕರು ಉನ್ನತ ಸ್ಥಾನಗಳನ್ನು ಅಲಂಕರಿಸಿ ಕೀಳು ಮಟ್ಟದ ರಾಜಕಾರಣ ಮಾಡದೇ ದೇಶದ ಒಳಿತಿಗಾಗಿ ಕೆಲಸ ಮಾಡಿದ್ದಾರೆ. ಈಗ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದೇಶದ ಅಭಿವೃದ್ದಿ ಕಡೇ ಗಮನಕೊಡದೇ ಕೀಳು ರಾಜಕಾರಣ ಮಾಡುತ್ತಾ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಖಂಡನೀಯ ಎಂದು ಅವರು ಆಕ್ಷೇಪಿಸಿದರು.

ಮಾಜಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ರಾಜ್ಯ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ್, ಯುವ ಮುಖಂಡ ವಿಜಯಕುಮಾರ್ ಜಿ. ರಾಮಕೃಷ್ಣ ಮುಂತಾದವರು ಮಾತನಾಡಿ, ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿದರು. ಪ್ರತಿಭಟನೆಯಲ್ಲಿ ಮಾಜಿ ಮೇಯರ್ ಶ್ರೀಮತಿ ಚಂದ್ರಿಕಾ ಪರಮೇಶ್ವರ್, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸುಭಾಷ್ ರಾಠೋಡ್, ಬಾಬುರಾವ್ ಜಹಾಗೀರದಾರ್, ಸವಿತಾ ಚಿಂಚನಪಳ್ಳಿ ಮುಂತಾದವರು ಪಾಲ್ಗೊಂಡಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here