ಕಲಬುರಗಿ: ಅಯೋಧ್ಯ ರಾಮ ಮಂದಿರ ಉದ್ಘಾಟನೆಯ ಸಂಭ್ರಮಾಚರಣೆ ವೇಳೆ ಸಂಭವಿಸಿದ ಗಲಾಟೆ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಕ್ಷೇತ್ರದ ಚಿತ್ತಾಪುರ ತಾಲೂಕಿನ ವಾಡಿಯಲ್ಲಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಚಿತ್ತಾಪುರ ತಹಶೀಲ್ದಾರ್ ಸೈಯದ್ ಷಾಷಾವಲಿ ಅವರು ಈ ಆದೇಶ ಹೊರಡಿಸಿದ್ದಾರೆ. ಸೋಮವಾರ ನಡೆಸಲಾದ ಶ್ರೀರಾಮ ಮೂರ್ತಿ ಮೆರವಣಿಗೆ ವೇಳೆ ಗಲಾಟೆಯಾಗಿದೆ. ಪರಿಣಾಮ ಕಾನೂನು ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತಾ ಕ್ರಮವಾಗಿ ಜ.25ರ ಬೆಳಗ್ಗೆ 6:00 ಗಂಟೆ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ತಿಳಿಸಿದ್ದಾರೆ.
ಅಗತ್ಯ ಸೇವೆಗಳಾದ ಆಸ್ಪತ್ರೆ, ಔಷಧದ ಅಂಗಡಿ ಹೊರತುಪಡಿಸಿ ಇತರ ಅಂಗಡಿ- ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಮತ್ತು ನಾಲ್ಕಕ್ಕಿಂತ ಹೆಚ್ಚು ಜನರು ಗುಂಪು ಗುಂಪಾಗಿ ಸಂಚರಿಸುವಂತಿಲ್ಲ ಎಂದು ಸೂಚಿಸಿದ್ದಾರೆ.