ಕಲಬುರಗಿ: ನಗರದ ಸೂಪರ್ ಮಾರುಕಟ್ಟೆಯಲ್ಲಿ ನಿರ್ಮಿಸಲಾದ ನಗರ ಬಸ್ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣನವರ ಹೆಸರು ನಾಮಕರಣ ಮಾಡಬೇಕು ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಗುರುನಾಥ ಪೂಜಾರಿ ಒತ್ತಾಯಿಸಿದರು.
ಬಸ್ ನಿಲ್ದಾಣದಿಂದ ಕೂಗಳತೆ ದೂರದಲ್ಲಿ ಸಂಗೊಳ್ಳಿ ರಾಯಣ್ಣ ವೃತ್ತ ಇದೆ. ಸಂಗೊಳ್ಳಿ ರಾಯಣ್ಣ ಅಪ್ರತಿಮ ಹೋರಾಟಗಾರ. ಅವರ ಹೋರಾಟವನ್ನು ಸ್ಮರಿಸಲು ನಿಲ್ದಾಣಕ್ಕೆ ಅವರ ಹೆಸರು ನಾಮಕರಣ ಮಾಡಬೇಕು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನಿಲ್ದಾಣಕ್ಕೆ ರಾಯಣ್ಣನವರ ಹೆಸರು ಇಡಬೇಕು ಎಂದು ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರು ಅಂದಿನ ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರಿಗೆ ಪತ್ರ ಬರೆದಿದ್ದರು. ಶ್ರೀರಾಮುಲು ಅವರು ಅದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿ, ಕ್ರಮ ಕೈಗೊಳ್ಳಲು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದರು ಎಂದು ತಿಳಿಸಿದರು.
ಜನವರಿ 25 ರಂದು ಬಸ್ ನಿಲ್ದಾಣ ಉದ್ಘಾಟನೆಯಾಗಲಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಉದ್ಘಾಟಿಸುವರು. ಅವರಿಗೂ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪರಮೇಶ ಆಲಗೂಡ, ಕಾರ್ಯದರ್ಶಿ ಶಿವರಾಜ ಪೂಜಾರಿ, ಪ್ರಧಾನ ಕಾರ್ಯದರ್ಶಿ ರವಿ ಪೂಜಾರಿ ಸೇರಿ ಹಲವರು ಹಾಜರಿದ್ದರು.