ಸಿಎಂ ಜನತಾ ದರ್ಶನ: ಸಾರ್ವಜನಿಕರ ಅರ್ಜಿಗಳಿಗೆ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ: ಸಿ.ಎಂ.ಸಿದ್ದರಾಮಯ್ಯ

0
24

ಕಲಬುರಗಿ: ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನರಿಂದ ಆಯ್ಕೆಯಾದ ಸರ್ಕಾರ ಸಾರ್ವಜನಿಕರ ಅಹವಾಲು ಆಲಿಸುವುದು ಅದರ ಪ್ರಥಮ ಕರ್ತವ್ಯ. ಸರ್ಕಾರದ ಭಾಗವಾಗಿರುವ ಅಧಿಕಾರಿಗಳು ಸಾರ್ವಜನಿಕರ ಅರ್ಜಿಗಳಿಗೆ ಸ್ಪಂದಿಸದೆ ನಿರ್ಲಕ್ಷ್ಯ ವಹಿಸಿದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬುಧವಾರ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧ ಮುಂಭಾಗ ನನ್ನ ಜನ-ನನ್ನ ಅಭಿಮಾನ ಘೋಷವಾಕ್ಯದ ಜನಸ್ಪಂದನ ಕಾರ್ಯಕ್ರಮದಲ್ಲಿ ನಾಡಿನ ಜನರ ಸಮಸ್ಯೆ ಆಲಿಸಿ ಅವರು ಮಾತನಾಡಿದರು.

Contact Your\'s Advertisement; 9902492681

ಕಚೇರಿಗೆ ಬರುವ ಸಾರ್ವಜನಿಕರಿಗೆ, ಹಿರಿಯ ನಾಗರೀಕರಿಗೆ, ವಿಶೇಷ ಚೇತನರಿಗೆ ಸೌಜನ್ಯಯುತವಾಗಿ ಅವರ ಸಮಸ್ಯೆ ಆಲಿಸಿ ಬಗೆಹರಿಸಬೇಕು ಎಂದ ಮುಖ್ಯಮಂತ್ರಿಗಳು, ಇಂದಿನ ಜನತಾ ದರ್ಶನದಲ್ಲಿ ಸ್ವೀಕೃತ ಎಲ್ಲಾ ಅರ್ಜಿಗಳು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಿ ಮುಂದಿನ 1 ತಿಂಗಳಿನಲ್ಲಿ ಎಲ್ಲವು ವಿಲೇವಾರಿ ಮಾಡುವ ಮೂಲಕ ಜನರ ಕಣ್ಣೊರೆಸುವ ಕೆಲಸ ಮಾಡಲಾಗುವುದು ಎಂದರು.

ಇದಕ್ಕು ಮುನ್ನ ಮುಖ್ಯಮಂತ್ರಿಗಳು ಹೊಸ ಭರವಸೆ ಇಟ್ಟು ಸಮಸ್ಯೆ ಹೊತ್ತು ಬಂದ ಸಾರ್ವಜನಿಕರ ಕುಳಿತ ಸ್ಥಳಕ್ಕೆ ಹೋಗಿ ಅವರ ಅರ್ಜಿ ಪಡೆದು ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು. ಕೆಲ ಅರ್ಜಿಗಳನ್ನು ಸ್ಥಳದಲ್ಲಿಯೆ ಪರಿಹಾರಕ್ಕೂ ಸೂಚಿಸಿದರು.

ಮುಖ್ಯಮಂತ್ರಿಗಳಿಗೆ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ, ನಗರಾಭಿವೃದ್ಧಿ ಸಚಿವ ಸುರೇಶ ಬಿ.ಎಸ್., ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಸಾಥ್ ನೀಡಿದರು.

ಮುಖ್ಯಮಂತ್ರಿಗಳ ಜನತಾ ದರ್ಶನ ಹಿನ್ನೆಲೆಯಲ್ಲಿ ರಾಜ್ಯದ ಮೂಲೆ ಮೂಲೆಯಿಂದ ಸಮಸ್ಯೆ ಹೊತ್ತು ಬರುವ ಜನರಿಗೆ ಸ್ಥಳಲ್ಲಿಯೆ ಪರಿಹಾರ ನೀಡಲು ಮತ್ತು ಮುಖ್ಯಮಂತ್ರಿಗಳ ಕಚೇರಿಯಿಂದ ಬರುವ ಕರೆಗೆ ಸ್ಪಂದಿಸಲು ಕಲಬುರಗಿ ಜಿಲ್ಲೆಯಿಂದ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಡಿ.ಸಿ.ಪಿ. ಕನಿಕ ಸಿಕ್ರಿವಾಲ್, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಮಹಾನಗರ ಪಾಲಿಕೆ ಉಪ ಆಯುಕ್ತ ಮಾಧವ ಗಿತ್ತೆ, ಸಹಾಯಕ ಆಯುಕ್ತೆ ರೂಪಿಂದರ್ ಕೌರ್ ಸೇರಿದಂತೆ ಅನೇಕ ಜಿಲ್ಲಾ ಮಟ್ಟದ ಅಧಿಕಾರಿಗಳು ವಿಡಿಯೋ ಕಾನ್ಫೆರೆನ್ಸ್ ಮೂಲಕ ಜನಸ್ಪಂದನದಲ್ಲಿ ಭಾಗಿಯಾಗಿದ್ದರು.

40ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ: ಮುಖ್ಯಮಂತ್ರಿಗಳ ಜನತಾ ದರ್ಶನದಲ್ಲಿ ಕಲಬುರಗಿ ಜಿಲ್ಲೆಗೆ ಸಂಬಂಧಿಸಿದಂತೆ ಕಂದಾಯ ಇಲಾಖೆ-16, ಅಂಬೇಡ್ಕರ ಅಭಿವೃದ್ಧಿ ನಿಗಮ-9, ಸಹಕಾರ ಇಲಾಖೆ-6, ಆಹಾರ ಇಲಾಖೆ-6, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ-4, ಜೆಸ್ಕಾಂ-1 ಹಾಗೂ ವಿಕಲಚೇತನರ ಕಲ್ಯಾಣ ಇಲಾಖೆ-1 ಅರ್ಜಿ ಸ್ವೀಕೃತವಾಗಿ ಎಂಬ ಆರಂಭಿಕ ಮಾಹಿತಿ ಇದ್ದು, ಈ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here