ಯಾದಗಿರಿ: ಜಿಲ್ಲಾ ಕೇಂದ್ರದಲ್ಲಿ ಅಂಬೇಡ್ಕರ್ ಭವನಕ್ಕೆ ಸ್ಥಳ ಗುರುತಿಸಿ ಕಾಮಗಾರಿ ಆರಂಭಿಸುವಂತೆ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ.
ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಜಿಲ್ಲಾ ಸಂಚಾಲಕ ಮರೆಪ್ಪ ಚಟ್ಟೆರಕರ್ ಜಿಲ್ಲೆಯಾದ ನಂತರ ಜಿಲ್ಲಾ ಮಟ್ಟದ ಭವನ ನಿರ್ಮಾಣಕ್ಕೆ ಅನುದಾನವೂ ಬಿಡುಗಡೆಯನ್ನು ಸರ್ಕಾರ ಮಾಡಿದೆ ಆದರೆ ಇದುವರೆಗೆ ಸ್ಥಳ ಗುರುತಿಸುವ ಕೆಲಸವನ್ನು ಜಿಲ್ಲಾಡಳಿತ ಮಾಡದೇ ಇರುವುದು ಸೋಜಿಗದ ಸಂಗತಿ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಗಳ ಭವನದ ಹಿಂಭಾಗದಲ್ಲಿ ಸ್ಥಳ ಗುರುತಿಸಲಾಗಿದೆ ಎನ್ನಲಾಗುತ್ತಿದ್ದರೂ ಇದುವರೆಗೆ ಯಾವುದೇ ಮಾಹಿತಿಯನ್ನು ಅಧಿಕಾರಿಗಳು ನೀಡದೇ ಇರುವುದರಿಂದ ಅಂಬೇಡ್ಕರ್ ಅಭಿಮಾನಿಗಳಿಗೆ ನಿರಾಸೆಯಾಗಿದ್ದು ತಕ್ಷಣ ಸ್ಥಳ ಗುರ್ತು ಮಾಡಿದ ಬಗ್ಗೆ ಬಹಿರಂಗಗೊಳಿಸಿ ಕಾಮಗಾರಿ ತ್ವರಿತವಾಗಿ ಆರಂಭಿಸಬೇಕೆಂದು ಅವರು ಆಗ್ರಹಿಸಿದರು.
ಇಲ್ಲವಾದಲ್ಲಿ ಹಂತ ಹಂತವಾಗಿ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಅವರು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಗೋಪಾಲ ತಳಿಗೇರಿ, ಮಲ್ಲಿನಾಥ ಸುಂಗಲಕರ್, ಶಿವಕುಮಾರ ಗಿರೆಪ್ಪನೋರ್ ಸೇರಿದಂತೆ ಇನ್ನಿತರ ಕಾರ್ಯಕರ್ತರು ಹಾಜರಿದ್ದರು. ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮದ ಭರವಸೆ ನೀಡಿದರು.