ಕಲಬುರಗಿ: ಅಫಜಲಪುರ ತಾಲೂಕಿನ ಕುಡಿಯುವ ನೀರಿನ ಸಮಸ್ಯೆ ನೀಗಿಸುವಂತೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಶಿವಕುಮಾರ್ ನಾಟಿಕಾರ ಅವರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದು ತಾಲೂಕಿನ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಹಾಗಾಗಿ ಸತ್ಯಾಗ್ರಹ ಕೈಬಿಡುವಂತೆ ಮನವಿ ಮಾಡಿರುವುದಾಗಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, ಶಿವಕುಮಾರ್ ಅವರ ಆರೋಗ್ಯ ವಿಚಾರಿಸುವ ಉದ್ದೇಶದಿಂದ ಮೊಬೈಲ್ ಮೂಲಕ ಕರೆ ಮಾಡಿ ಮಾತನಾಡಿದ್ದು, ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯದಲ್ಲಿ ಲಭ್ಯವಿರುವ ನೀರಿನ ಪ್ರಮಾಣ ಹಾಗೂ ಮುಂಬರುವ ದಿನಗಳಲ್ಲಿ ಈ ಜಲಾಶಯಗಳನ್ನು ಅವಲಂಬಿಸಿರುವ ಜಿಲ್ಲೆಗಳ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಅವಶ್ಯಕತೆಗಳಿಗೆ ಅನುಗುಣವಾಗಿ ಅಗತ್ಯ ವೈಜ್ಞಾನಿಕ ಕ್ರಮ ಕೈಗೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರ ತನ್ನ ಜವಾಬ್ದಾರಿಯನ್ನು ನಿಭಾಯಿಸಿ ಅಫಜಲಪುರ ತಾಲೂಕಿನ ಜನ ಹಾಗೂ ಜಾನುವಾರುಗಳಿಗೆ ಕುಡಿ ಯುವ ನೀರು ಒದಗಿಸಲು ಬೇಕಾಗುವ ಎಲ್ಲ ಕ್ರಮ ಕೈಗೊಳ್ಳಲಿದೆ. ಹಾಗಾಗಿ, ಆರೋಗ್ಯದ ದೃಷ್ಟಿಯಿಂದ ಈ ಕೂಡಲೇ ಉಪವಾಸ ಸತ್ಯಾಗ್ರಹವನ್ನು ಕೈಬಿಡುವಂತೆ ಮನವಿ ಮಾಡಿದ್ದೇನೆ ಎಂದು ಅವರು ಹೇಳಿದ್ದಾರೆ.
ಈಗಾಗಲೇ ಹೇಳಿರುವಂತೆ ರಾಜ್ಯದಲ್ಲಿ ಕಳೆದ 5 ದಶಕಗಳಲ್ಲೇ ಕಂಡು ಕೇಳರಿಯದಂತ ಭೀಕರ ಬರಗಾಲ ಎದುರಾಗಿದ್ದು ಸೂಕ್ತ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಕೂಡ ಮಾಡಲಾಗಿದೆ. ಆದರೆ, ಕೇಂದ್ರದಿಂದ ಇದೂವರೆಗೆ ಸೂಕ್ತ ಸ್ಪಂದನೆ ಸಿಗದಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿಯನ್ನು ನಿಭಾಯಿಸಲು ರಾಜ್ಯ ಸರ್ಕಾರ ಕುಡಿಯುವ ನೀರಿಗಾಗಿ ರೂ 200 ಕೋಟಿ ಹಾಗೂ SDRF ನಲ್ಲಿ ಸುಮಾರು ರೂ 864 ಕೋಟಿ ಅನುದಾನ ಬಿಡುಗಡೆ ಮಾಡಿದೆ.
ಬರದಿಂದ ಸುಮಾರು 48,000 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದ್ದು, 33 ಲಕ್ಷ ರೈತರಿಗೆ ಬೆಳೆಪರಿಹಾರವಾಗಿ ರೂ 650 ಕೋಟಿ ಹಣವನ್ನು ವಿತರಿಸಲಾಗಿದೆ. ಇದಲ್ಲದೆ, ರಾಜ್ಯಕ್ಕೆ ಬರಬೇಕಿದ್ದ ಅನುದಾನ ಬಿಡುಗಡೆ ಮಾಡಲು ನಿರ್ದೇಶನ ನೀಡುವಂತೆ ಸುಪ್ರೀಂಕೋರ್ಟಿನಲ್ಲಿ ಕೇಂದ್ರದ ವಿರುದ್ಧ ಅರ್ಜಿ ಕೂಡಾ ಸಲ್ಲಿಸಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲಾಗಿದ್ದು ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರುಒದಗಿಸುವುದು ಸೇರಿದಂತೆ ಬರ ಪರಿಸ್ಥಿತಿಗೆ ಅನುಗುಣವಾಗಿ ಕೈಗೊಳ್ಳಬೇಕಿರುವ ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.