ಕಲಬುರಗಿ: ಆಯುಷ್ಮಾನ ಭಾರತ ಯೋಜನೆ ಜಾರಿಗೊಂಡು ಇದೇ ಸೆಪ್ಟೆಂಬರ್ 23 ರಂದು ಒಂದು ವರ್ಷ ಪೂರ್ಣಗೊಳ್ಳುತ್ತಿದ್ದು, ಈ ಒಂದು ವರ್ಷದಲ್ಲಿ ಕಲಬುರಗಿ ಜಿಲ್ಲೆಯ 1.5 ಲಕ್ಷಕ್ಕಿಂತ ಹೆಚ್ಚು ಜನರು ಸದರಿ ಯೋಜನೆಯ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ ಎಂದು ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ ಹೇಳಿದರು.
ಅವರು ರವಿವಾರ ಕಲಬುರಗಿ ಮಿನಿ ವಿಧಾನಸೌಧದ ಆವರಣದಲ್ಲಿ ಹಮ್ಮಿಕೊಂಡಿರುವ “ಆಯುಷ್ಮಾನ ಭಾರತ” ಪಾಕ್ಷಿಕ ದಿನಾಚರಣೆಯ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಆಯುಷ್ಮಾನ ಭಾರತ ಯೋಜನೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸೆಪ್ಟೆಂಬರ್ 15 ರಿಂದ 30 ರವರೆಗೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ, ತಾಲೂಕು ಆಸ್ಪತ್ರೆಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ಉಪ ಆರೋಗ್ಯ ಕೇಂದ್ರಗಳಲ್ಲಿ ಮತ್ತು ನೋಂದಾಯಿತ ಆಸ್ಪತ್ರೆಗಳಲ್ಲಿ ಯೋಜನೆಯ ಬಗ್ಗೆ ಹೆಚ್ಚಿನ ಪ್ರಚಾರ ನೀಡಲಾಗುವುದು ಎಂದರು.
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ ಈ ಕಾರ್ಯಕ್ರಮದಲ್ಲಿ ದಕ್ಷಿಣ ಮತಕ್ಷೇತ್ರ ಶಾಸಕರಾ ದತ್ತಾತ್ರೇಯ ಪಾಟೀಲ ರೇವೂರ ಮಾತನಾಡಿ, ಆಯುಷ್ಮಾನ ಭಾರತ ಯೋಜನೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮುಖ್ಯವಾದ ಯೋಜನೆಯಾಗಿದ್ದು, ಕಲಬುರಗಿ ಜಿಲ್ಲೆಯ ಬಿ.ಪಿ.ಎಲ್. ಹಾಗೂ ಎ.ಪಿ.ಎಲ್. ಕಾರ್ಡ್ ಫಲಾನುಭವಿಗಳು ಹೆಲ್ತ್ ಕಾರ್ಡುಗಳನ್ನು ಪಡೆದು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದರು.
ಆಯುಷ್ಮಾನ ಭಾರತ ಯೋಜನೆಯಲ್ಲಿ ಹೆಚ್ಚಿನ ರೋಗಗಳಿಗೆ ಚಿಕಿತ್ಸಾ ಸೌಲಭ್ಯಗಳಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಇದರ ಮಾಹಿತಿಯನ್ನು ಪಡೆದು ವಿವಿಧ ರೋಗಗಳ ಚಿಕಿತ್ಸೆ ಪಡೆದು ಗುಣಮುಖರಾಗಬಹುದೆಂದರು.
ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾವ ಮಲಾಜಿ, ಜಿಲ್ಲಾಧಿಕಾರಿ ಶರತ್ ಬಿ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪಿ. ರಾಜಾ, ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಪಾಟೀಲ್ ಮಾಧವರಾವ ಕೆ., ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ರಾಜಕುಮಾರ ಕುಲಕರ್ಣಿ ಹಾಗೂ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.