ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ರಾಜ್ಯದ ವಿವಿಧ ಅಕಾಡೆಮಿಗಳಿಗೆ ನಾಮನಿರ್ದೇಶನಗೊಂಡಿರುವ ಸದಸ್ಯರಿಗೆ ಸತ್ಕಾರ ಸಮಾರಂಭವನ್ನು ನಗರದ ಕನ್ನಡ ಭವನದಲ್ಲಿ ಏ.7 ರ ಬೆಳಗ್ಗೆ 11.15 ಕ್ಕೆ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.
ವಿವಿಧ ಅಕಾಡೆಮಿಗಳಿಗೆ ನೇಮಕಗೊಂಡಿರುವ ನೂತನ ಸದಸ್ಯರು ಹಾಕಿಕೊಂಡಿರುವ ಯೋಜನೆಗಳನ್ನು ತಿಳಿಸಿಕೊಡುವ ಮತ್ತು ಆ ಮೂಲಕ ಈ ಭಾಗದ ಸಾಹಿತ್ಯ ಮತ್ತು ಸಾಂಸ್ಕøತಿಕ ಕ್ಷೇತ್ರದ ಬೆಳವಣಿಗೆಗಾಗಿ ಪೂರಕವಾದ ವಿಚಾರಗಳನ್ನು ಚರ್ಚಿಸುವ ನಿಟ್ಟಿನಲ್ಲೂ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರಾದ ಡಾ. ಚಂದ್ರಕಲಾ ಬಿದರಿ, ಸಿದ್ಧರಾಮ ಹೊನ್ಕಲ್, ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಂಜೀವಕುಮಾರ ಅತಿವಾಳೆ, ಕರ್ನಾಟಕ ಲಲಿತಕಲಾ ಅಕಾಡೆಮಿ ಸದಸ್ಯ ಡಾ. ಬಸವರಾಜ ಎಲ್ ಜಾನೆ, ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯ ಬಿ.ಎಚ್. ನಿರಗುಡಿ, ಕರ್ನಾಟಕ ಸಂಗೀತ, ನೃತ್ಯ ಅಕಾಡೆಮಿ ಸದಸ್ಯ ಶಂಕರ ಹೂಗಾರ, ನಾಟಕ ಅಕಾಡೆಮಿ ಸದಸ್ಯ ಜೇವರ್ಗಿ ರಾಜಣ್ಣ ಅವರನ್ನು ವಿಶೇಷವಾಗಿ ಸತ್ಕರಿಸಲಾಗುವುದು.
ಹಿರಿಯ ಸಾಹಿತಿ ಡಾ. ನಾಗೇಂದ್ರ ಮಸೂತಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಡಾ. ಕವಿತಾ ಸಂಗೋಳಗಿ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಜಿಲ್ಲಾ ಕಸಾಪ ದ ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್ ಧನ್ನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.