ವೀರ್ ಮತ್ತು ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 1 ಲಕ್ಷಕ್ಕೂ ಹೆಚ್ಚಿನ ಕೂಸೆಕ್ಸ್ ನೀರು
ಕಲಬುರಗಿ: ಮಹಾರಾಷ್ಟ್ರ ರಾಜ್ಯದ ಸೋಲಾಪೂರ ಜಿಲ್ಲೆಯ ಉಜ್ಜನಿ ಮತ್ತು ಸತಾರಾ ಜಿಲ್ಲೆಯ ವೀರ್ ಜಲಾಶಯದಿಂದ ಭೀಮಾ ನದಿಗೆ ಸೋಮವಾರ 1 ಲಕ್ಷಕ್ಕೂ ಹೆಚ್ಚಿನ ಕ್ಯುಸೆಕ್ಸ್ ನೀರು ಹರಿಬಿಡಲಾಗಿದ್ದು, ಜಿಲ್ಲೆಯ ಭೀಮಾ ನದಿ ತೀರದಲ್ಲಿ ಯಾವುದೇ ಅಹಿತಕರ ಘಟನೆಯಾಗದಂತೆ ಕಟ್ಟೆಚ್ಚರ ವಹಿಸುವಂತೆ ಕಲಬುರಗಿ ಜಿಲ್ಲಾಡಳಿತಕ್ಕೆ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದ್ದಾರೆ.
ಉಜ್ಜನಿ ಮತ್ತು ವೀರ್ ಜಲಾಶಯದ ನೀರು ಜಿಲ್ಲೆಯ ಜೀವನಾಡಿ ಭೀಮಾ ನದಿಯ ಸೊನ್ನ ಬ್ಯಾರೇಜಿಗೆ ತಲುಪಲು ಸುಮಾರು 24 ಗಂಟೆ ಸಮಯವಾಗಲಿದೆ. ಸೊನ್ನ ಬ್ಯಾರೇಜಿನಿಂದ ಈಗಾಗಲೆ 11 ಗೇಟ್ ಮೂಲಕ ಮುಂಜಾಗ್ರತವಾಗಿ 33,000 ಕ್ಯುಸೆಕ್ ನೀರು ಭೀಮಾ ನದಿಗೆ ಹೊರಬಿಡಲಾಗಿದ್ದು, ಬ್ಯಾರೇಜಿಗೆ ನೀರಿನ ಒಳ ಹರಿವು ಹೆಚ್ಚಾದಂತೆ ಹೊರ ಹರಿವು ಹೆಚ್ಚಾಗಲಿದೆ. ಸೊನ್ನ ಬ್ಯಾರೇಜ್ ಕೆಳಗಡೆ ಇರುವ ನದಿ ಪಾತ್ರದ ಜನರು ಸುರಕ್ಷಿತವಾಗಿರುವಂತೆ ಅಧಿಕಾರಿ ವರ್ಗ ಗ್ರಾಮಗಳಲ್ಲಿ ಡಂಗೂರ ಸಾರುವುದು, ಮೈಕ್ ಮೂಲಕ ಜಾಗೃತಿ ಮೂಡಿಸುವಂತಹ ಅಗತ್ಯ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.
ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಇರುವುದರಿಂದ ಜಿಲ್ಲಾ, ತಾಲೂಕು, ಹೋಬಳಿ ಹಾಗೂ ಗ್ರಾಮ ಪಂಚಾಯತ್ ಮಟ್ಟದ ಅಧಿಕಾರಿ-ಸಿಬ್ಬಂದಿಗಳು ಕೇಂದ್ರ ಸ್ಥಾನದಲ್ಲಿದ್ದು ಪ್ರವಾಹ ಮತ್ತು ಭಾರಿ ಮಳೆಯಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಂಭಾವ್ಯ ಪ್ರವಾಹ ಪೀಡಿತ ಪ್ರದೇಶಗಳ ಜನರನ್ನು ಮತ್ತು ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವುದಲ್ಲದೆ ಕಾಳಜಿ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳ ಕಲ್ಪಿಸಿರುವುದನ್ನು ಕೂಡಲೆ ಖಾತ್ರಿಪಡಿಸಿಕೊಳ್ಳಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಪ್ರವಾಹ ಪರಿಸ್ಥಿತಿ ಎದುರಾದಲ್ಲಿ ನದಿ, ಹಳ್ಳ, ಕೆರೆ ದಡದಲ್ಲಿರುವ ದೇವಸ್ಥಾನ, ಮಸೀದಿ, ಪ್ರಾರ್ಥನಾ ಮಂದಿರಗಳಲ್ಲಿ ಪೂಜೆ ಹಾಗೂ ಬಾಗಿನ ಅರ್ಪಿಸುವವರನ್ನು ಮನವೊಲಿಸಿ ನದಿ ದಡಕ್ಕೆ ಹೋಗದಂತೆ ತಿಳಿಹೇಳಬೇಕು. ಮೀನುಗಾರರು ಮೀನು ಹಿಡಿಯಲು ನದಿಯಲ್ಲಿ ಹೋಗದಂತೆ ನೋಡಿಕೊಳ್ಳಬೇಕು ಹಾಗೂ ಪ್ರವಾಹದಿಂದಾಗುವ ಹಾನಿ ಬಗ್ಗೆ ಪ್ರತಿ ದಿನ ಜಿಲ್ಲಾಡಳಿತಕ್ಕೆ ವರದಿ ನೀಡಬೇಕೆಂದು ತಾಲೂಕಾ ಆಡಳಿತಕ್ಕೆ ಸೂಚನೆ ನೀಡಿದ್ದಾರೆ.
ನಿರಂತರ ಮಳೆಯಿಂದ ಅಪಾಯವಿರುವ ಮನೆ ಗೋಡೆ, ಶಾಲೆ ಹಾಗೂ ಇತರೆ ಕಟ್ಟಡಗಳ ಕುಸಿದು ಸಾವು ನೋವುಗಳು ಸಂಭವಿಸುವ ಸಾಧ್ಯತೆ ಇದ್ದು, ಈ ನಿಟ್ಟಿನಲ್ಲಿ ಜಿಲ್ಲೆಯ ಸಾರ್ವಜನಿಕರು ಹುಷಾರಾಗಿರಬೇಕು ಮತ್ತು ಸುರಕ್ಷಿತ ಸ್ಥಳದಲ್ಲಿ ವಾಸ ಮಾಡಬೇಕೆಂದು ಅವರು ತಿಳಿಸಿದ್ದಾರೆ.
ನದಿ ದಂಡೆ ಹೋಗದಂತೆ ಮನವಿ: ಭೀಮಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಜಿಲ್ಲೆಯ ನದಿ, ಕೆರೆ, ಹಳ್ಳದ ದಡದಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ಧನ-ಕರುಗಳನ್ನು ಮೇಯಿಸುವುದು ಹಾಗೂ ಅಪಾಯವಿರುವ ಸೇತುವೆಗಳಲ್ಲಿ ಸಂಚರಿಸದಂತೆ ಸಾರ್ವಜನಿಕರಲ್ಲಿ ಮನವಿ ಮಾಡಿರುವ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು, ನದಿ ತೀರದ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರು ಈಜಾಡುವುದಾಗಲಿ, ಪೋಟೊ-ಸೆಲ್ಪಿಗಳನ್ನು ತೆಗೆಯುವುದಾಗಲಿ ಮಾಡಬಾರದೆಂದು ಅವರು ಮನವಿ ಮಾಡಿಕೊಂಡಿದ್ದಾರೆ.