ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರು ನಡೆ ಅತ್ಯಂತ ಖಂಡನೆ ಮತ್ತು ತನ್ನ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಬಿಜೆಪಿ ಏಜೆಂಟ್ ಆಗಿ ಕಾರ್ಯನಿರ್ವಹಣೆಯ ತಾಜಾ ಉದಾಹರಣೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೆಮ್ಮೂದ್ ಪಟೇಲ್ ಸಾಸರಗಾಂವ ಆರೋಪಿಸಿದ್ದಾರೆ.
ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರಕಾರವಾಗಿರುವ ಕಾಂಗ್ರೆಸ್ ಸರಕಾರವನ್ನು ದುರ್ಬಲಗೊಳಿಸಲು ರಾಜಭವನವನ್ನು ಬಿಜೆಪಿಯ ಟೂಲ್ ಆಗಿ ಬಳಸಿಕೊಳುತ್ತಿದೆ. ರಾಜ್ಯ ಸರಕಾರ ಕೇಂದ್ರ ಸರಕಾರಕ್ಕೆ ಕನ್ನಡಿಗರ ಹಕ್ಕು ಕೇಳುತ್ತಿರುವುದನ್ನು ಸಹಿಸದೆ ಈ ಕೃತ್ಯಕ್ಕೆ ಮುಂದಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ದುರಿದ್ದಾರೆ.
ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಅವರು ಅಸಂವಿಧಾನಿಕ ಮಾರ್ಗವನ್ನು ಬಳಸಿ ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ದೇಶಕ್ಕೆ ಗೊತ್ತಿರುವ ವಿಚಾರ. ಮತ್ತೆ ರಾಜ್ಯದಲ್ಲಿ ರಾಜ್ಯಪಾಲರನ್ನು ಬಳಿಸಿಕೊಂಡು ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರಗಳನ್ನು ಇಕ್ಕಟ್ಟಿಗೆ ಹಾಕಿ ದುರ್ಬಲವಾಗಿಸುವ ಹುನ್ನಾರ ನಡೆಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಮುಡಾ ಗಹರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ನಡೆಯುತ್ತಿದ್ದು, ತನಿಖೆ ಹಂತದಲ್ಲಿರುವಾಗಲೆ ರಾಜ್ಯಪಾಲರು ಹಸ್ತಕ್ಷೇಪಪಡಿಸುವ ಮೂಲಕ ತನಿಖೆಯನ್ನು ದಾರಿ ತಪ್ಪಿಸಿ ಕಾಂಗ್ರೆಸ್ ಸರಕಾರವನ್ನು ಉರುಳಿಸಲು ಸಂಚು ರೂಪಿಸುತ್ತಿದ್ದಾರೆ. ರಾಜ್ಯದ ಜನರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಇದ್ದಾರೆ. ಇಂತಹ ಕೀಳು ಮಟ್ಟದ ರಾಜಕೀಯಕ್ಕೆ ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.