ನವದೆಹಲಿ: ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ಅವರು ಸೋಮವಾರ ಭಾರತದ 47 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ನ್ಯಾಯಮೂರ್ತಿ ಬೊಬ್ಡೆ ಅವರಿಗೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ರಾಷ್ಟ್ರಪತಿ ಭವನದಲ್ಲಿ ಬೆಳಿಗ್ಗೆ 9: 30 ಕ್ಕೆ ಪ್ರತಿಜ್ಞಾ ವಿಧಿ ಬೋಧನೆ ಮಾಡಿದರು.
ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಅಕ್ಟೋಬರ್ 18 ರಂದು ಸುಪ್ರೀಂ ಕೋರ್ಟ್‌ನ ಎರಡನೇ ಹಿರಿಯ-ನ್ಯಾಯಾಧೀಶರಾದ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ಅವರನ್ನು ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದರು. ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ಸುಮಾರು 18 ತಿಂಗಳು ಸಿಜೆಐ ಆಗಿ ಸೇವೆ ಸಲ್ಲಿಸಲಿದ್ದು, ಏಪ್ರಿಲ್ 23, 2021 ರಂದು ನಿವೃತ್ತರಾಗಲಿದ್ದಾರೆ.
ಏಪ್ರಿಲ್ 24, 1956 ರಂದು ನಾಗ್ಪುರದಲ್ಲಿ ಜನಿಸಿದ ನ್ಯಾಯಮೂರ್ತಿ ಬೊಬ್ಡೆ ಪದವಿ ಮುಗಿಸಿ ನಾಗ್ಪುರ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದುಕೊಂಡಿದ್ದಾರೆ.