ಭಾರತೀಯರು ಆಚರಿಸುವ ಯಾವುದೇ ಹಬ್ಬ-ಹರಿದಿನಗಳು, ಸಮಾರಂಭ, ದಿನಾಚರಣೆ, ಜಯಂತಿ, ಉತ್ಸವಗಳು ಸಾಮಾನ್ಯವಾಗಿ ಅಮರವಾಗಿ ಉಳಿದಿರುವ ಯಾವುದೋ ಗತ ವ್ಯಕ್ತಿಯ, ಶಕ್ತಿಯ ಅಥವಾ ಪ್ರಾಚೀನತೆಯ ಪ್ರತೀಕಗಳಾಗಿರುತ್ತವೆ.
ಹೀಗೆ ಹಿಂದೂಗಳ ಪ್ರಮುಖ ಹಬ್ಬಗಳಲ್ಲೊಂದಾದ ಮಹಾಶಿವರಾತ್ರಿ ಆಚರಣೆಗೂ ಹಿನ್ನೆಲೆಯಿದೆ, ಅನೇಕ ಕಥೆಗಳಿವೆ. ಶಿವನು ಪಾರ್ವತಿ ದೇವಿಯನ್ನು ವಿವಾಹವಾದ ದಿನವಾಗಿ ಶಿವರಾತ್ರಿಯೆಂದು ಹೇಳಲಾಗುತ್ತದೆ. ಅಲ್ಲದೆ, ದೇವತೆಗಳು ಹಾಗೂ ಅಸುರರ ನಡುವೆ ಸಮುದ್ರ ಮಂಥನ ನಡೆದು ವಿಷ ಉದ್ಭವವಾದಾಗ, ಅದನ್ನು ಶಿವ ಕುಡಿದ. ವಿಷ ಗಂಟಲೊಳಗಿಂದ ಇಳಿಯದಂತೆ ಪಾರ್ವತಿ ಇಡೀ ರಾತ್ರಿ ತಡೆದಳು ಎನ್ನುತ್ತದೆ ಶಿವಪುರಾಣದ ಇನ್ನೊಂದು ಮಹಿಮೆ. ಜತೆಗೆ, ಭಗೀರಥನ ತಪಸ್ಸಿಗೆ ಮೆಚ್ಚಿ ಇಳೆಗೆ ಇಳಿದು ಬಂದ ಗಂಗೆಯನ್ನು ಶಿವ ತನ್ನ ಜಡೆಯಲ್ಲಿ ತುಂಬಿಸಿಕೊಂಡಿದ್ದ.
ಇದರಿಂದ ವಿಚಲಿತನಾದ ಭಗೀರಥ ಗಂಗೆಯನ್ನು ಭೂಮಿಗೆ ಹರಿಸುವಂತೆ ಶಿವನನ್ನು ಪ್ರಾರ್ಥಿಸಿದ. ಆತನ ಭಕ್ತಿಗೆ ಮೆಚ್ಚಿ ಶಿವ ಗಂಗೆಯನ್ನು ಹರಿಯಬಿಟ್ಟಿದ್ದು ಇದೇ ದಿನ ಎನ್ನುತ್ತದೆ ಪುರಾಣ. ಇನ್ನು, ಶಿವನ ಆದಿ ಮತ್ತು ಅಂತ್ಯ ಹುಡುಕಲು ಹೊರಟ ವಿಷ್ಣು ಹಾಗೂ ಬ್ರಹ್ಮನಿಗೆ, ಶಿವರಾತ್ರಿಯಂದು ಶಿವ ಲಿಂಗರೂಪಿಯಾಗಿ ದರ್ಶನ ನೀಡಿದ ಎಂಬುದು ಪ್ರತೀತಿ. ಶಿವರಾತ್ರಿ ಆಚರಣೆಯ ಹಿನ್ನೆಲೆ ಕೈಲಾಸವಾಸಿ ಶಿವನಿಗೆ ಶಿವರಾತ್ರಿ ಅತ್ಯಂತ ಪ್ರಿಯವಾದ ದಿನ. ಶಿವರಾತ್ರಿಯಂದು ತನ್ನನ್ನು ಪೂಜಿಸುವ ಭಕ್ತರಿಗೆ ತಾನು ವಿಶೇಷವಾಗಿ ಅನುಗ್ರಹ ನೀಡುವುದಾಗಿ ಸ್ವತ: ಶಿವನೇ ಪಾರ್ವತಿಯಲ್ಲಿ ಅರುಹಿದ್ದಾನೆ ಎನ್ನುತ್ತದೆ ಶಿವಪುರಾಣ. ಮಾಘ ಬಹುಳ ಚತುರ್ದಶಿಯ ರಾತ್ರಿಯೇ ಶಿವ ಪಾರ್ವತಿಯನ್ನು ವರಿಸಿದ್ದನಂತೆ. ಹೀಗಾಗಿ ಅಂದು ರಾತ್ರಿ ದೇವಾನು ದೇವತೆಗಳೆಲ್ಲರೂ ಜಾಗರಣೆ ಮಾಡಿ, ಗಿರಿಜಾ ಕಲ್ಯಾಣ ವೀಕ್ಷಿಸಿ, ಶಿವಪಾರ್ವತಿಯರಿಬ್ಬರನ್ನೂ ಪೂಜಿಸಿದರಂತೆ. ಹೀಗಾಗಿಯೇ ಜಾಗರಣೆ ಪದ್ಧತಿ ಆಚರಣೆಗೆ ಬಂದಿದೆ ಎನ್ನಲಾಗುತ್ತದೆ.
ಜಾಕೀರ್ ಹುಸೇನ್, ಮೈಸೂರು