ಕಲಬುರಗಿ: ರಾಜ್ಯದಲ್ಲಿ ಪ್ರಾದೇಶಿಕ ಅಸಮಾತೋಲನೆ ನಿವಾರಣೆಗೆ ತಾವು ಕಟಿಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಡಾ.ನಂಜುಂಡಪ್ಪ ಸಮಿತಿಯ ವರದಿಯಂತೆ ಎಲ್ಲಾ ಹಿಂದುಳಿದ ತಾಲೂಕುಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ರಾಜ್ಯ ಸರ್ಕಾರವು ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಸೋಮವಾರ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಲಾದ ಸಾಧನ ಸಮಾರಂಭ ಮತ್ತು ಫಲಾನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ “ಸವಾಲುಗಳ 1 ವರ್ಷ- ಪರಿಹಾರದ ಸ್ಪರ್ಶ” ಸರ್ಕಾರದ ಪ್ರಗತಿ ಹೊತ್ತಿಗೆ ಬಿಡುಗಡೆ ಮಾಡಿ ವರ್ಚುವೆಲ್ ವೇದಿಕೆ (ಆನ್ಲೈನ್) ಮೂಲಕ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು.
ಈ ಕಾರ್ಯಕ್ರಮದ ನೇರಪ್ರಸಾರ ವ್ಯವಸ್ಥೆಯನ್ನು ಕಲಬುರಗಿಯ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಆಯೋಜಿಸಲಾಗಿತ್ತು.
ಕಲ್ಯಾಣ ಕರ್ನಾಟಕ ಜನರ ಭಾವನೆಗೆ ಬೆಲೆಕೊಟ್ಟು ಹೈದ್ರಾಬಾದ ಕರ್ನಾಟಕ ಎಂಬ ದಾಸ್ಯ ಪದವನ್ನು ತೆಗೆದು “ಕಲ್ಯಾಣ ಕರ್ನಾಟಕ “ವಿಶಾಲಾರ್ಥದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮರು ನಾಮಕರಣ ಮಾಡಲಾಗಿದೆ. ಕೇವಲ ಮರುನಾಮಕರಣ ಮಾಡಿದರೆ ಸಾಲದು ಎಂದು ಮಾಜಿ ರಾಜ್ಯಸಭಾ ಸದಸ್ಯ ಬಸವರಾಜ ಪಾಟೀಲ ಸೇಡಂ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕøತಿಕ ಸಂಘ ರಚಿಸಿ ಇದಕ್ಕಾಗಿ 500 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಕಲ್ಯಾಣ ಕರ್ನಾಟಕದ ಪ್ರಗತಿಗೆ ಶಕ್ತಿಮೀರಿ ಶ್ರಮಿಸಲಾಗುವುದು ಎಂದು ಸಿ.ಎಂ. ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿಯೂ ಅಭಿವೃದ್ಧಿ ಕಾರ್ಯಗಳ ವೇಗಕ್ಕೆ ಯಾವುದೇ ತಡೆಯಾಗದಂತೆ ನೋಡಿಕೊಳ್ಳಲಾಗಿದೆ. ಕೊರೋನಾ ಸೋಂಕಿಗೆ ಲಾಕ್ ಡೌನ್ ಪರಿಹಾರವಲ್ಲ. ಕೊರೋನಾದೊಂದಿಗೆ ಜೀವನ ನಡೆಸಬೇಕಿದೆ. ಸಾಮಾಜಿಕ ಅಂತರ ಕಾಪಾಡಲೆಬೇಕು, ಮಾಸ್ಕ್ ಧರಿಸಲೆಬೇಕು ಎಂದು ರಾಜ್ಯದ ಜನತೆಗೆ ಕರೆ ನೀಡಿದರು.
ಬಾಗಲಕೋಟೆ ಜಿಲ್ಲೆಯಿಂದ ಆನ್ಲೈನ್ನಲ್ಲಿ ಭಾಗವಹಿಸಿದ ರಾಜ್ಯದ ಉಪಮುಖ್ಯಮಂತ್ರಿಗಳು, ಲೋಕೋಪಯೋಗಿ, ಸಮಾಜ ಕಲ್ಯಾಣ ಸಚಿವರು, ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಎಂ. ಕಾರಜೋಳ ಅವರು ಮಾತನಾಡಿ, ಕಲಬುರಗಿ ಒಳಗೊಂಡಂತೆ ಕಲ್ಯಾಣ ಕರ್ನಾಟಕ ಸೂಫಿ-ಸಂತರ ನಾಡು ಹಾಗೂ ಶರಣರ ಬೀಡಾಗಿದೆ. 12 ನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣ ಅವರು ಲಿಂಗ ಹಾಗೂ ಜಾತಿ-ಭೇದವಿಲ್ಲದೆ, ಸರ್ವಜನಾಂಗದ ಸಮಾನತೆಗೆ ಶ್ರಮಿಸಿದವರಾಗಿದ್ದಾರೆ. ಇದೇ ಹಾದಿಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರ ಸಾಗಿದೆ ಎಂದು ಗುಣಗಾನ ಮಾಡಿದರು.
ಪ್ರಗತಿ ಹೊತ್ತಿಗೆ ಬಿಡುಗಡೆ: ಸರ್ಕಾರದ ಒಂದು ವರ್ಷದ ಸಾಧನೆಯ ಅಂಕಿ-ಅಂಶಗಳ ಒಳಗೊಂಡ “ಸವಾಲುಗಳ 1 ವರ್ಷ- ಪರಿಹಾರದ ಸ್ಪರ್ಶ” ಪ್ರಗತಿ ಹೊತ್ತಿಗೆಯನ್ನು ಕಲಬುರಗಿಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಾಲಾಜಿ ಬಿಡುಗಡೆಗೊಳಿಸಿದರು. ಇದಲ್ಲದೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ “ಜನಪದ” ಮತ್ತು “ಮಾರ್ಚ್ ಆಫ್ ಕರ್ನಾಟಕ” ಮಾಸಿಕ ಸಂಚಿಕೆಯನ್ನು ಸಹ ಜನಪ್ರತಿನಿಧಿಗಳು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಬಸವರಾಜ ಮತ್ತಿಮೂಡ, ಸುಭಾಷ ಗುತ್ತೇದಾರ, ವಿಧಾನ ಪರಿಷತ್ತಿನ ಶಾಸಕ ಬಿ.ಜಿ.ಪಾಟೀಲ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ, ಜಿಲ್ಲಾ ಪಂಚಾಯತ್ ಸದಸ್ಯ ಶಿವರಾಜ ರದ್ದೆವಾಡಗಿ, ಪ್ರಾದೇಶಿಕ ಆಯುಕ್ತ ಡಾ.ಎನ್.ವಿ.ಪ್ರಸಾದ, ಜಿಲ್ಲಾಧಿಕಾರಿ ಶರತ್ ಬಿ., ಕಲಬುರಗಿ ನಗರ ಪೊಲೀಸ್ ಆಯುಕ್ತ ಎನ್. ಸತೀಷಕುಮಾರ, ಜಿಲ್ಲಾ ಪೊಲೀಸ್ ಅಧೀಕ್ಷಕ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪಂಚಾಯತ್ ಸಿ.ಇ.ಓ. ಡಾ.ಪಿ.ರಾಜಾ, ಡಿಸಿಪಿ ಕಿಶೋರ ಬಾಬು, ಮಹಾನಗರ ಪಾಲಿಕೆ ಆಯುಕ್ತ ರಾಹುಲ ಪಾಂಡ್ವೆ, ಐ.ಎ.ಎಸ್. ಪ್ರೊಬೇಷನರ್ ಅಧಿಕಾರಿ ಆಕಾಶ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಫಲಾನುಭವಿಗಳು ಇದ್ದರು.
ಕಲಬುರಗಿ ಅಪರ ಜಿಲ್ಲಾಧಿಕಾರಿ ಡಾ.ಶಂಕರ ವಣಿಕ್ಯಾಳ ಸ್ವಾಗತಿಸಿದರೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಸಿದ್ದೇಶ್ವರಪ್ಪ ಜಿ.ಬಿ. ವಂದಿಸಿದರು.