ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ದತ್ತಾತ್ರೇಯ ಚಂದ್ರಶೇಖರ ಪಾಟೀಲ್ ರೇವೂರ್ ( ಅಪ್ಪುಗೌಡ) ಅವರು ಇಂದು ಅಧಿಕಾರ ಸ್ವೀಕರಿಸಿದರು. ಈ ಮೂಲಕ ಕೆ.ಕೆ.ಆರ್.ಡಿ.ಬಿಯ ಅಧಿಕಾರ ವಹಿಸಿಕೊಂಡ ಮೊದಲ ಶಾಸಕರಾಗಿದ್ದಾರೆ.
ಈ ಮೊದಲು ಕ್ಯಾಬಿನೆಟ್ ದರ್ಜೆಯ ಸಚಿವರು ಮಾತ್ರ ಮಂಡಳಿಯ ಅಧ್ಯಕ್ಷ ಅಲಂಕರಿಸಬಹುದಿತ್ತು. ಸನ್ಮಾನ್ಯ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಪ್ರಸಕ್ತ ರಾಜ್ಯ ಸರ್ಕಾರ ನಿಯಮಕ್ಕೆ ತಿದ್ದುಪಡಿ ತರುವ ಮೂಲಕ ಮಂಡಳಿ ವ್ಯಾಪ್ತಿಯ 6 ಜಿಲ್ಲೆಗಳ ಯಾವುದೇ ಶಾಸಕರು ಅಧ್ಯಕ್ಷರಾಗಬಹುದಾಗಿದೆ. ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ವ್ಯಾಪ್ತಿಯಲ್ಲಿವೆ.
ಈ ಸಂದರ್ಭದಲ್ಲಿ ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ್ ಜಾಧವ್, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಬಾಬುರಾವ್ ಚಿಂಚಿನಸೂರ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಂತರಾಯ ಮಾಲಾಜಿ, ಶಾಸಕರಾದ ಸುಭಾಷ ಗುತ್ತೇದಾರ್, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ. ಪಾಟೀಲ್, ಹೆಚ್ ಕೆ ಸಿಸಿಐ ಅಧ್ಯಕ್ಷ ಅಮರ್ ನಾಥ್ ಪಾಟೀಲ್, ಜಿಲ್ಲಾ ಪಂಚಾಯತ್ ಸದಸ್ಯ ಶಿವರಾಜ್ ಪಾಟೀಲ್ ರದ್ದೇವಾಡಗಿ,ಮಂಡಳಿ ಕಾರ್ಯದರ್ಶಿಗಳೂ ಆದ ಪ್ರಾದೇಶಿಕ ಆಯುಕ್ತ ಡಾ. ಎನ್. ವಿ. ಪ್ರಸಾದ್ , ಕಲಬುರಗಿ ನಗರ ಪೊಲೀಸ್ ಆಯುಕ್ತ ಎನ್. ಸತೀಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಮಂಡಳಿಯ ಜಂಟಿ ನಿರ್ದೇಶಕರಾದ ಪ್ರವೀಣ್ ಪ್ರಿಯಾ ಡೇವಿಡ್ ಮುಂತಾದವರು ಇದ್ದರು.