ಕಲಬುರಗಿ: ಅರಣ್ಯ ಇಲಾಖೆಗಳ ಸಿಬ್ಬಂದಿಗಳು ಅನ್ಯೋನ್ಯತೆ ಕೆಲಸ ಮಾಡುವ ಮೂಲಕ ಅರಣ್ಯ ಸಂರಕ್ಷಣೆ ಮಾಡಬೇಕು ಎಂದು ನಿವೃತ್ತ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಆರ್. ಆರ್. ಯಾದವ್ ಅವರು ಕಿವಿಮಾತು ಹೇಳಿದ್ದಾರೆ.
ಅವರು ಶನಿವಾರ ನಗರದ ಅರಣ್ಯ ಇಲಾಖೆಯ ಕಚೇರಿ ಸಂಕಿರಣದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಅವರು ಮಾತನಾಡಿದರು.
ಅರಣ್ಯ ಸಿಬ್ಬಂದಿಗಳು ಸೇವೆ ಸಲ್ಲಿಸುವ ಸಂದರ್ಭದಲ್ಲಿ ಅಗತ್ಯ ವಸ್ತುಗಳು ಮತ್ತು ಶಸ್ತ್ರಾಸ್ತ್ರಗಳೊಂದಿಗೆ ಕಾಡಿನಲ್ಲಿ ಪ್ರಯಾಣ ಮಾಡಬೇಕು. ಕಾಡು ಪ್ರಾಣಿಗಳ ದಾಳಿಗಳಿಂದ ರಕ್ಷಣೆ ಮಾಡಿಕೊಳ್ಳುವ ಸಾಮಥ್ರ್ಯ ಹೊಂದಿರಬೇಕು. ತಮ್ಮ ಜೀವನ ರಕ್ಷಣೆ ಮಾಡಿಕೊಳ್ಳುವುದರ ಮೂಲಕ ಅಧಿಕಾರಿ ಮತ್ತು ಸಿಬ್ಬಂದಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಕರೆ ನೀಡಿದರು.
ಕಲಬುರಗಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿ. ಗೀತಾಂಜಲಿ ಅವರು ಅಧ್ಯಕ್ಷತೆವಹಿಸಿ ಮಾತನಾಡಿ, ತೊಂದರೆಗಳನ್ನು ಅರಿತು ಸಮಯ ಪ್ರಜ್ಞೆಯಿಂದ ಕೆಲಸ ಮಾಡಿದಾಗ ಮಾತ್ರ ಮುಂದಾಗುವ ಅನಾಹುತಗಳನ್ನು ತಡೆಯಬಹುದು ಎಂದು ಸಿಬ್ಬಂದಿಗೆ ತಿಳಿ ಹೇಳಿದರು.
ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ. ಎನ್. ಚವ್ಹಾಣ್ ಅವರು ಮಾತನಾಡಿ, ಅರಣ್ಯ ಇಲಾಖೆಯಲ್ಲಿ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯ ಉತ್ತಮವಾದುದಾಗಿದೆ. ಆರೋಗ್ಯ ಕಾಪಾಡಿಕೊಳ್ಳುವುದರ ಜೊತೆಗೆ ಜಾಗರೂಕತೆÉಯಿಂದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು.
ಪ್ರಾದೇಶಿಕ ಅರಣ್ಯ ವಿಭಾಗದ ಪ್ರಭಾರಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಾಬುರಾವ್ ಪಾಟೀಲ್ ಅವರು ಮಾತನಾಡಿ, ಹುತಾತ್ಮರ ಕುಟುಂಬದ ಅನುಕೂಲಕ್ಕಾಗಿ ಅರಣ್ಯ ಹುತಾತ್ಮರ ಸಮಿತಿ ರಚಿಸಲಾಗಿದ್ದು, ಹುತಾತ್ಮರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಅತಿಥಿ ಗಣ್ಯರು ಹುತಾತ್ಮರ ಸ್ಮಾರಕಕ್ಕೆ ಪುಷ್ಪ ಗುಚ್ಚ ಸಮರ್ಪಣೆ ಮಾಡಿ ಗೌರವ ಸಲ್ಲಿಸಿದರು. ಹುತಾತ್ಮರ ಗೌರವ ಸೂಚಕವಾಗಿ ಪೊಲೀಸ್ ಸಿಬ್ಬಂದಿಯಿಂದ ಮೂರು ಸುತ್ತು ಗುಂಡು ಹಾರಿಸಲಾಯಿತಲ್ಲದೆ ಎರಡು ನಿಮಿಷ ಮೌನಾಚರಣೆ ಮಾಡಲಾಯಿತು
ವಲಯ ಅರಣ್ಯ ಅಧಿಕಾರಿ ವಿಜಯಕುಮಾರ್ ವಂದಿಸಿದರು. ವಲಯ ಅರಣ್ಯ ಅಧಿಕಾರಿ ಸುನೀಲ್‍ಕುಮಾರ್ ಚವ್ಹಾಣ್ ಕಾರ್ಯಕ್ರಮ ನಿರೂಪಿಸಿದರು.