ಕಲಬುರಗಿ: ಆಳಂದ ತಾಲೂಕಿನಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರನ್ನು ನೇಮಿಸಿಕೊಂಡ ಮಾಲೀಕರ ವಿರುದ್ಧ ಕಾನೂನಿನ್ವಯ ಕ್ರಮ ಜರುಗಿಸಿ ಮಕ್ಕಳನ್ನು ಮರು ಶಾಲೆಗೆ ದಾಖಲಿಸಲು ಎಲ್ಲಾ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಆಳಂದ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ಹಿರಿಯ ಶ್ರೇಣಿ ನ್ಯಾಯಾಧೀಶರಾದ ಎಂ.ಸಿ. ನಾಡಗೌಡಾ ಅವರು ತಿಳಿಸಿದ್ದಾರೆ.
ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ ಆಳಂದ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಆಳಂದ ಜೆ.ಎಂ.ಎಫ್.ಸಿ. ನ್ಯಾಯಾಲಯದ ಆವರಣದಲ್ಲಿ ಏರ್ಪಡಿಸಲಾಗಿದ್ದ “ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ನೇಮಕಾತಿ ವಿರುದ್ಧ” ಜಾಗೃತಿ ರಥಕ್ಕೆ ಅವರು ಚಾಲನೆ ನೀಡಿ ಮಾತನಾಡಿ, ಸರ್ಕಾರವು ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡುತ್ತಿದ್ದು, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಪಾಲಕರು ತಮ್ಮ 14 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಬೇಕೆಂದರು.
ನ್ಯಾಯವಾದಿಗಳ ರಕ್ಷಣೆಗಾಗಿ ಕಾನೂನು ರಚಿಸಲು ಆಗ್ರಹ
ಕಾರ್ಯಕ್ರಮದಲ್ಲಿ ಆಳಂದ ಜೆ.ಎಂ.ಎಫ್.ಸಿ. ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿಗಳಾದ ಗುರುಪ್ರಸಾದ ಸಿ. ಹಾಗೂ ಜೆ.ಎಂ.ಎಫ್.ಸಿ. ನ್ಯಾಯಾಲಯದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಚಂದ್ರಕಾಂತ ಮಾತನಾಡಿ, ಆಳಂದ ತಾಲೂಕಿನಲ್ಲಿ ದಿಢೀರ ಪತ್ತೆದಾಳಿ ಕೈಗೊಂಡು ಮಕ್ಕಳನ್ನು ರಕ್ಷಿಸಿ ಸರ್ಕಾರದಿಂದ ಸಿಗುವ ಸೌಲಭ್ಯವನ್ನು ದೊರಕಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕೆಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಆಳಂದ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಡಿ.ಬೋಸಗಾ, ನ್ಯಾಯವಾದಿಗಳ ಸಂಘದ ಕಾರ್ಯದರ್ಶಿ ಬಿ.ಜಿ. ಬಳಗಿ, ಪ್ರಧಾನ ನ್ಯಾಯಾಲಯದ ಸಹಾಯಕ ಸರ್ಕಾರಿ ಅಭಿಯೋಜಕಿ ಶೂಭಶ್ರೀ ಬಡಿಗೇರ, ಅಪರ ನ್ಯಾಯಾಲಯದ ಸಹಾಯಕ ಸರ್ಕಾರಿ ಅಭಿಯೋಜಕಿ ಜ್ಯೋತಿ, ಆಳಂದ ತಹಶೀಲ್ದಾರ ಯಲ್ಲಪ್ಪಾ ಸುಬೇದಾರ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕ ಸಂತೋಷ ಕುಲಕರ್ಣಿ ಉಪಸ್ಥಿತರಿದ್ದರು.