ಬೆಂಗಳೂರು: ಕೋವಿಡ್ ಸೊಂಕಿನ ಪ್ರಸರಣದ ಹಿನ್ನೆಲೆಯಲ್ಲಿ ಮೇ 24 ರಿಂದ ಆರಂಭವಾಗಬೇಕಾಗಿದ್ದ ದ್ವಿತೀಯ ಪಿ.ಯು.ಸಿ. ಪರೀಕ್ಷಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದರು.
ಇಂದು ವಿಧಾನರ್ಸಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಸಚಿವರು ಪರೀಕ್ಷೆ ನಡೆಸುವ ದಿನಾಂಕಗಳನ್ನು ಪರೀಕೆಗಳು ಆರಂಭವಾಗುವ 15-20 ದಿನಗಳ ಮುಂಚಿತವಾಗಿ ಪ್ರಕಟಿಸಲಾಗುವುದು ಎಂದು ತಿಳಿಸಿದರು.
ಮೇ 24 ರಿಂದ ಜೂನ್ 16ರ ವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ನಡೆಸಲು ಈ ಮೊದಲು ನಿರ್ಧರಿಸಲಾಗಿತ್ತು. ರಾಜ್ಯಾದ್ಯಂತ 1047 ಕೇಂದ್ರಗಳಲ್ಲಿನ 5562 ಕಾಲೇಜುಗಳಲ್ಲಿ ಪರೀಕ್ಷೆ ನಡೆಸಲು ಎಲ್ಲಾ ಸಿದ್ದತೆಗಳನ್ನು ಕೈಗೊಳ್ಳಲಾಗಿತ್ತು. ಈ ಬಾರಿ 592816 ಹೊಸ ವಿದ್ಯಾರ್ಥಿಗಳು, 76422 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 17470 ಖಾಸಗಿ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 686708 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು ಎಂದು ತಿಳಿಸಿದ ಸಚಿವರು, ಈಗಾಗಲೇ ಪರೀಕ್ಷೆಗೆ ಹಾಜರಾಗಬೇಕಾಗಿರುವ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಮುಂದೂಡಿರುವದರಿಂದ ಯಾವುದೇ ಕಾರಣಕ್ಕೂ ವಿಚಿಲಿತರಾಗದೆ ಶ್ರದ್ಧೆಯಿಂದ ತಮ್ಮ ವಿದ್ಯಾಭ್ಯಾಸವನ್ನು ಎಂದಿನಂತೆ ಮುದುವರಿಸಬೇಕೆಂದು ಮನವಿ ಮಾಡಿದರು.
ದ್ವಿತೀಯ ಪಿ.ಯು.ಸಿ. ಪರೀಕೆಗಳ ನಂತರ ನಡೆಸಬೇಕೆಂದು ನಿರ್ಧರಿಸಲಾಗಿದ್ದ ಪ್ರಥಮ ಪಿ.ಯು.ಸಿ. ಪರೀಕ್ಷೆಗಳನ್ನು ಕೋವಿಡ್ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದ್ದು, ಪ್ರಥಮ ವರ್ಷದ ಪಿ.ಯು.ಸಿ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.
ಈ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷ ಪ್ರಾರಂಭವಾಗುವ ಮುನ್ನ ಬ್ರಿಡ್ಜ್ ಕೋರ್ಸ್‍ಗಳನ್ನು ನಡೆಸಲಾಗುತ್ತದೆ. ಇಲಾಖೆಯ ಯು.ಟ್ಯೂಬ್ ಚಾನೆಲ್‍ಗಳ ಮೂಲಕ ಈಗಿನಿಂದಲೇ ಈ ಬ್ರಿಡ್ಜ್ ಕೋರ್ಸ್‍ಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪರೀಕ್ಷೆಗಳನ್ನು ಮುಂದೂಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸತತವಾಗಿ ಸಂಪರ್ಕದಲ್ಲಿರುವಂತೆ ಉಪನ್ಯಾಸಕರು ಮನೆಯಿಂದಲೇ ಕೆಲಸ ನಿರ್ವಹಿಸಲು ಸೂಚಿಸಲಾಗಿದೆ. ವಿದ್ಯಾರ್ಥಿಗಳೊಂದಿಗೆ ನಿರಂತರ ಸಂಪರ್ಕ, ಇಲಾಖೆಯ ಪಠ್ಯ ಭೋದನಾ ಕ್ರಮಗಳನ್ನು ಅವರೊಂದಿಗೆ ಚರ್ಚಿಸುವುದು ಸೇರಿದಂತೆ ಎಲ್ಲಾ ಆಡಳಿತಾತ್ಮಕ ಕ್ರಮಗಳಿಗೆ ಅವರು ಸದಾ ಲಭ್ಯವಾಗಬೇಕಿದೆ. ಕೋವಿಡ್ ಕರ್ತವ್ಯದಲ್ಲಿ ತೊಡಗಿಸಿಕೊಂಡಿರುವ ಉಪನ್ಯಾಸಕರು ತಮ್ಮ ಕೋವಿಡ್ ಜವಾಬ್ದಾರಿಗಳನ್ನು ಪೂರೈಸಲು ತಿಳಿಸಲಾಗಿದೆ ಎಂದು ತಿಳಿಸಿದರು.
ಪ್ರಾಯೋಗಿಕ ಪರೀಕ್ಷೆಗಳನ್ನು ಈಗಾಗಲೇ ಮುಂದೂಡಲಾಗಿದೆ. ರಾಜ್ಯಾದ್ಯಂತ ಕೋವಿಡ್ ಎರಡನೇ ಅಲೆ ತೀವ್ರವಾಗಿ ಹರಡುತ್ತಿರುವುದರಿಂದ ಪರೀಕ್ಷೆಗಳಿಗೆ ಸಹಕಾರ ನೀಡಬೇಕಾಗಿದ್ದ ಇಲಾಖೆಯು ಕೋವಿಡ್ ಕರ್ತವ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಪರೀಕ್ಷೆಗಳನ್ನು ತೆಗೆದುಕೊಳ್ಳಬೇಕಾಗಿದ್ದ ವಿದ್ಯಾರ್ಥಿಗಳು ತಮ್ಮ ತಮ್ಮ ಸ್ವಂತ ಊರುಗಳಲ್ಲಿ ವಾಸ್ತವ್ಯ ಹೋಡಿರುತ್ತಾರೆ. ವಿದ್ಯಾರ್ಥಿಗಳು ಮತ್ತು ಪೋಷಕರು ಮಾನಸಿಕ ಒತ್ತಡಗಳು ಸೇರಿದಂತೆ ಎಲ್ಲಾ ಆಯಾಮಗಳನ್ನು ಸಮಗ್ರವಾಗಿ ಚರ್ಚಿಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಸಚಿವರು ತಿಳಿಸಿದರು.
ಸಿ.ಬಿ.ಎಸ್.ಇ ಸೇರಿದಂತೆ ಕೇಂದ್ರ ಮಂಡಳಿ ಪರೀಕ್ಷೆಗಳು ಹಾಗೇಯೇ ಮಧ್ಯಪ್ರದೇಶ, ಜಾರ್ಖಂಡ್, ಮಹಾರಾಷ್ಟ್ರ, ತಮಿಳುನಾಡು, ಹಿಮಾಚಲ ಪ್ರದೇಶ, ಛತ್ತೀಸ್‍ಗಡ, ರಾಜಾಸ್ಥಾನ, ಪಂಜಾಬ್, ತೆ¯ಂಗಾಣ ರಾಜ್ಯಗಳ 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಎಲ್ಲಾ ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡು ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಸಚಿವರು ತಿಳಿಸಿದರು.