ಕಲಬುರಗಿ: ಕಲಬುರಗಿ ವಿಮಾನ ನಿಲ್ದಾಣದಿಂದ ವಾಣಿಜ್ಯ ಕಾರ್ಯಚರಣೆ ಪ್ರಾರಂಭಿಸುವಂತೆ ರಾಜ್ಯ ಸರ್ಕಾರವು ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾಗೆ ಪ್ರಸ್ತಾವನೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಕ್ಕೆ ರಾಜ್ಯ ಸರ್ಕಾರದಿಂದ ಭದ್ರತೆ ಒದಗಿಸುವ ಮತ್ತು ಸ್ಥಳೀಯವಾಗಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಆರ್.ವೆಂಟಕೇಶ ಕುಮಾರ ಅವರ ಅಧ್ಯಕ್ಷತೆಯಲ್ಲಿ ವಿಮಾನ ನಿಲ್ದಾಣದ ಅಧಿಕಾರಿಗಳು ಮತ್ತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಸಭೆ ನಡೆಯಿತು.
ರಾಜ್ಯ ಸರ್ಕಾರದ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯು ಏರಪೋರ್ಟ್ ಆಥಾರಿಟಿ ಆಫ್ ಇಂಡಿಯಾಗೆ ಪ್ರಸ್ತಾವನೆ ಸಲ್ಲಿಸಿದ ನಂತರ ಡೈರೆಕ್ಟರ್ ಜನರಲ್ ಆಫ್ ಸಿವಿಲ್ ಏವಿಯೇಷನ್, ಏರಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಮತ್ತು ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯೂರಿಟಿ ತಂಡವು ಕಲಬುರಗಿ ನಿಲ್ದಾಣಕ್ಕೆ ಭೇಟಿ ನೀಡಿ ಭದ್ರತಾ ವಿಷಯಗಳ ಕುರಿತು ಈಗಾಗಲೆ ಪರಿಶೀಲಿಸಿದೆ. ಸದರಿ ತಂಡಗಳು ಈ ಹಿಂದೆಯೂ ಕಳೆದ ಮಾರ್ಚ್ ತಿಂಗಳಿನಲ್ಲಿ ಇಲ್ಲಿಗೆ ಭೇಟಿ ನೀಡಿದ್ದವು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ತಿಳಿಸಿದ್ದಾರೆ.
ಕಲಬುರಗಿ ವಿಮಾನ ನಿಲ್ದಾಣದಿಂದ ವಾಣಿಜ್ಯ ಕಾರ್ಯಾಚರಣೆ ಕುರಿತು ರಾಜ್ಯ ಸರ್ಕಾರವು ಮತ್ತು ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದೊಂದಿಗೆ ಒಪ್ಪಂದ ಪ್ರಕ್ರಿಯೆಗಳು ಅಂತಿಮ ಹಂತದಲ್ಲಿದ್ದು, ಒಪ್ಪಂದ ನಂತರ ರಾಜ್ಯ ಸರ್ಕಾರ ಮತ್ತು ಎಎಐ ಕಾರ್ಯನಿರ್ವಹಣೆ ಸ್ಪಷ್ಠವಾಗಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಅಂತಿಮ ಹಂತದಲ್ಲಿ ಕೈಗೊಳ್ಳಬೇಕಾದ ಕಾರ್ಯಗಳನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.
ಸಭೆಯಲ್ಲಿ ಪ್ರಮುಖವಾಗಿ ವಿಮಾನ ನಿಲ್ದಾಣದ ಭದ್ರತೆ, ವಿಮಾನಗಳಿಗೆ ಇಂಧನ ಪೂರೈಕೆ, ಮಾನವ ಸಂಪನ್ಮೂಲ ಒದಗಿಸುವ ಮತ್ತು ಕಾರ್ಯಾಚರಣೆಗೆ ಪರವಾನಿಗೆ ಪಡೆಯುವ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಅಪರ ಜಿಲ್ಲಾಧಿಕಾರಿ ಶರಣಪ್ಪ ಸತ್ಯಂಪೇಟ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಟಿ.ಪರಶುರಾಮ, ಕಲಬುರಗಿ ವಿಮಾನ ನಿಲ್ದಾಣದ ಏರಪೋರ್ಟ್ ನಿರ್ದೇಶಕ ಸುಶೀಲ ಕೆ. ಶ್ರೀವಾಸ್ತವ, ನವದೆಹಲಿಯ ಏಲಿಯನ್ಸ್ ಏರ್ ಸಂಸ್ಥೆಯ ಸಿ.ಎಸ್.ಓ ಮನಬೀರ್ ಸಿಂಗ್, ಹೈದ್ರಾಬಾದ ಏಲಿಯನ್ಸ್ ಏರ್ ಕೋ-ಆರ್ಡಿನೇಟರ್ ವಿವೇಕಾನಂದ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ಭೀಮರಾವ ಎಸ್. ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.