ಕಲಬುರಗಿ: ಸೇರಿದಂತೆ 371(ಜೆ) ವ್ಯಾಪ್ತಿಯ ಹೈದ್ರಾಬಾದ ಕರ್ನಾಟಕ ಭಾಗದಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ತರಲು ಮತ್ತು ಉದ್ಯೋಗ ಸಮಸ್ಯೆ ನಿವಾರಣೆಗೆ ಮೈತ್ರಿ ಸರ್ಕಾರ ಸಂಕಲ್ಪ ಮಾಡಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ಅವರು ಗುರುವಾರ ಕಲಬುರಗಿ ನಗರದ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಸುದ್ದಿಗಾರದೊಂದಿಗೆ ಮಾತನಾಡುತ್ತ, ಈ ನಿಟ್ಟಿನಲ್ಲಿ ಹೈ.ಕ.ಭಾಗದಲ್ಲಿನ ಶಾಲೆಗಳ ನಿರ್ಮಾಣ, ದುರಸ್ತಿ ಮತ್ತು ಶಿಕ್ಷಕರ ನೇಮಕಾತಿ ಕುರಿತಂತೆ ಮುಂದಿನ 8-10 ದಿನಗಳಲ್ಲಿ ಈ ಭಾಗದ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಿ ಇದಕ್ಕೆ ಪರಿಹಾರ ಕಂಡುಕೊಳ್ಳಲಾಗುವುದು. ಈ ಸಂಬಂಧ ಸಮಗ್ರ ಮಾಹಿತಿಯೊಂದಿಗೆ ಸಭೆಗೆ ಬರಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಒಟ್ಟಾರೆ ಇಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸುವುದು ಮತ್ತು ಇತರೆ ಭಾಗದಂತೆ ಇಲ್ಲಿನ ವಿದ್ಯಾರ್ಥಿಗಳು ಸ್ಪರ್ಧಾತ್ಮಕವಾಗಿ ಹೆಚ್ಚಿನ ಅಂಕಗಳು ಪಡೆಯುವ ಮೂಲಕ ಉದ್ಯೋಗ ಪಡೆಯಬೇಕು ಎಂಬುದು ನಮ್ಮ ಅಶಯವಾಗಿದೆ ಎಂದರು.
ಹೈ.ಕ.ಮಂಡಳಿಯಿಂದಲೂ ಈ ಭಾಗದಲ್ಲಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ಕೊಟ್ಟು ಸಾವಿರಾರು ಕೋಟಿ ರೂ. ವ್ಯಯ ಮಾಡಲಾಗುತ್ತಿದೆ. ಮಾಜಿ ಕೇಂದ್ರ ಸಚಿವ ಡಾ.ಮಲ್ಲಿಕಾರ್ಜುನ ಖರ್ಗೆ ಅವರ ಒತ್ತಾಸೆಯಂತೆ ಕಲಬುರಗಿಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಸ್ಥಾಪಿಸಿದ ಪರಿಣಾಮ ಸಾವಿರಾರು ಸಂಖ್ಯೆಯ ಇಲ್ಲಿನ ಹೃದ್ರೋಗಿಗಳು ದೂರದ ಬೆಂಗಳೂರಿಗೆ ಅಲೆದಾಡುವುದನ್ನು ತಪ್ಪಿಸಲಾಗಿದೆ. ಪ್ರಸ್ತುತ ಜಯದೇವ ಆಸ್ಪತ್ರೆ ನೂತನ ಜಿಲ್ಲಾ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿಸ್ತೀರ್ಣ ಕಟ್ಟಡ ನಿರ್ಮಾಣಕ್ಕೆ 150 ಕೋಟಿ ರು. ನೀಡಲು ಕ್ರಮ ವಹಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಎಚ್.ಕೋನರೆಡ್ಡಿ, ವಿಧಾನ ಪರಿಷತ್ ಸದಸ್ಯ ತಿಪ್ಪಣಪ್ಪ ಕಮಕನೂರ ಸೇರಿದಂತೆ ಇನ್ನಿತರು ಇದ್ದರು.